

ಚಾಮರಾಜನಗರ: ರಾಜ್ಯ ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರು ಪ್ರಥಮ ಪ್ರಾಶಸ್ತದ ಮತ ನೀಡಿದರೆ, ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇ ಗೌಡ ಹೇಳಿದರು.
ಕಳೆದ 4 ಬಾರಿಯಿಂದಲೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕರು ನನ್ನನ್ನು ಆಯ್ಕೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದೇನೆ. ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದು ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ಯಾವುದೇ ಸಕಾರವಿದ್ದರೂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಈ ಕ್ಷೇತ್ರದಲ್ಲಿ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದೆ. 5ನೇ ಬಾರಿಗೆ ಸ್ಪರ್ಧಿಸುತ್ತಿದ್ದೇನೆ. ಶಿಕ್ಷಕರು ನನಗೆ ಪ್ರಥಮ ಪ್ರಾಶಸ್ತ್ರದ ಮತ ನೀಡಿ ನನ್ನನ್ನು ಗೆಲ್ಲಿಸಬೇಕು ಎಂದು ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಅನೇಕ ಬದಲಾವಣೆಯನ್ನು ತರಲಾಗಿದೆ. ಸಿದ್ದರಾಮಯ್ಯ ಅವರು 10ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ ಕೊಡಲು ತೀರ್ಮಾನ ಕೈಗೊಂಡಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ 170 ಕೋಟಿ ರೂ. ಅನುದಾನ ನೀಡಿದ್ದಾರೆ. ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. 5 ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೂ ತಲುಪಿಸಲು ಕ್ರಮವಹಿಸಲಾಗಿದೆ. ಮಹಿಳಾ ಶಿಕ್ಷಕಿಯರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈಗಾಗಲೇ ಹಳೆ ಪಿಂಚಣಿ ಯೋಜನೆ ಜಾರಿಯಲ್ಲಿರುವ ರಾಜ್ಯಗಳಿಗೆ ತೆರಳಿ ಅಧ್ಯಯನ ಮಾಡಿ ವರದಿ ಕೊಡಲು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಅಲ್ಲದೇ 7ನೇ ವೇತನ ಜಾರಿಗೂ ಮುಂದಾಗಿದೆ. 4 ಜಿಲ್ಲೆಗಳಲ್ಲೂ ಕಾಂಗ್ರೆಸ್ ಶಾಸಕರಿದ್ದು ಶಿಕ್ಷಕರ ಹಿತ ಕಾಯುವ ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಬಾರಿ ನಾನು ಗೆಲ್ಲುವ ವಿಶ್ವಾಸವಿದೆ ಎಂದರು.
ಗೋಷ್ಠಿಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಂಠ, ರಿಜೇಶ್, ಮುಖಂಡರಾದ ಮಹಮ್ಮದ್ ಅಸ್ಗರ್ ಮುನ್ನಾ, ಶ್ರೀನಿವಾಸನಾಯಕ, ಮಹದೇವಯ್ಯ ಹಾಜರಿದ್ದರು.