

ಚಾಮರಾಜನಗರ: ಸರ್ಕಾರಿ ವಸತಿ ಶಾಲೆಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುವ ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು, ವಾರ್ಡನ್ ಹಾಗೂ ನಿಲಯ ಪಾಲಕರು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕೆಆರ್‌ಇಐಎಸ್ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶುಕ್ರವಾವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ 50ಕ್ಕು ಹೆಚ್ಚು ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನು ಪಡೆದು ಪ್ರತಿಭಾ ಪುರಸ್ಕಾರ ಪಡೆದುಕೊಳ್ಳುವುದು ಹೆಮ್ಮೆ ಎನ್ನಿಸಿದೆ. ಆದರೆ, ವಸತಿ ಶಾಲೆಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಸಹ ಉತೀರ್ಣರಾಗುವ ಮಟ್ಟದಲ್ಲಿ ಅಲ್ಲಿನ ಶಿಕ್ಷಕರು, ವಾರ್ಡನ್ ಮತ್ತುನಿಲಯಪಾಲಕರು ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.
ಎಲ್ಲಾ ವಿದ್ಯಾರ್ಥಿಗಳು ಬುದ್ದಿವಂತರಾಗಿರುತ್ತಾರೆ. ಅವರನ್ನು ತಯಾರು ಮಾಡುವ ಶಿಕ್ಷಕರು ಹೆಚ್ಚಿನ ನಿಗಾ ವಹಿಸಬೇಕು. ಮುಂದಿನ ದಿನಗಳಲ್ಲಿ ಶೇ.100 ರಷ್ಟು ವಿದ್ಯಾರ್ಥಿಗಳು ಪಾಸಾಗಬೇಕು. ವಿದ್ಯಾರ್ಥಿಗಳ ಪಾಲಕರು ಬಹಳ ಶ್ರಮಪಟ್ಟು ಹಾಗೂ ವಿಶ್ವಾಸವಿಟ್ಟು ಹಾಸ್ಟೆಲ್‌ಗಳಿಗೆ ಸೇರಿಸುತ್ತಾರೆ. ಈ ವಿದ್ಯಾರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಯಾರು ಮಾಡಿ ಅವರನ್ನು ಉತ್ತೀರ್ಣರಾಗುವಂತೆ ಮಾಡಿ, ಭವಿಷ್ಯವನ್ನು ಉಜ್ವಲ ಗೊಳಿಸಿ. ಆಗ ನಿಮ್ಮೆಲ್ಲರ ಜೀವನ ಸಾರ್ಥಕವಾಗುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ ಮಾತನಾಡಿ, ಹಾಸ್ಟೆಲ್ ವಿದ್ಯಾರ್ಥಿಗಳು ಫೇಲ್ ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ನಿಟ್ಟಿನಲ್ಲಿ ಹಾಸ್ಟೆಲ್‌ಗಳು ಹಾಗೂ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಜತೆಗೂಡಿ ಕಾರ್ಯಗಾರವನ್ನು ಮಾಡಿದರೆ, ಹೆಚ್ಚಿನ ಫಲಿತಾಂಶ ಬರುತ್ತದೆ. ಮಕ್ಕಳಲ್ಲಿ ಅತ್ಮ ವಿಶ್ವಾಸ ಹೆಚ್ಚತ್ತದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲಿಂಗರಾಜೇಆರಸ್, ಜಿಲ್ಲಾ ಸಮನ್ವಯಾಧಿಕಾರಿ ಕೆ.ಪಿ.ಚಂದ್ರು, ಪ್ರಾಂಶುಪಾಲ ಗುರುಪ್ರಸಾದ್, ಮಹದೇವಪ್ರಸಾದ್, ಸವಿತಾ, ನಾಗೇಂದ್ರ, ಭವಾನಿಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.