ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಮತಯಾಚನೆ

25rajesh2
Published on

ಚಾಮರಾಜನಗರ : ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ, ಐದನೇ ಬಾರಿಗೆ ಅವರು ವಿಧಾನಪರಿಷತ್ ಪ್ರವೇಶ ಮಾಡಲು ಅವಕಾಶ ಮಾಡಿಕೊಡಿ ಎಂದು ಎಂಐಎಸ್‌ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಮನವಿ ಮಾಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್‌ಎಸ್ ಮಹಿಳಾ ಕಾಲೇಜುಗಳಿಗೆ ಶುಕ್ರವಾರ ತೆರಳಿ ಅಲ್ಲಿನ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದರು. ರಾಜ್ಯದಲ್ಲಿ ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಅನುಭವಿಗಳು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರವಾಗಿ ತಿಳಿದುಕೊಂಡಿರುವ ಉತ್ತಮ ಸಂಸದೀಯ ಪಟುಗಳಾದ ಮರಿತಿಬ್ಬೇಗೌಡರು ನಿಮ್ಮೆಲ್ಲರ ಪ್ರತಿನಿಧಿಯಾಗಿ ಮೇಲ್ಮನೆಗೆ ಹೋಗುವುದು ಸೂಕ್ತ. ಈಗಾಗಲೇ ನಾಲ್ಕು ಬಾರಿ ಆಯ್ಕೆಯಾಗಿ ನಿಮ್ಮೆಲ್ಲರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಈ ಬಾರಿಯು ಅವರನ್ನು ಪರಿಷತ್‌ಗೆ ಕಳುಹಿಸಿಕೊಟ್ಟರೆ, ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುವ ಜತೆಗೆ ಆಡಳಿತ ಪಕ್ಷದ ಸದಸ್ಯರಾಗಿರುವ ಕಾರಣದಿಂದ ಹೆಚ್ಚಿನ ಸೇವೆ ಮಾಡಲು ಸದಾವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿಕ್ಷಕರ ಪರವಾಗಿದ್ದು, ಈ ಹಿಂದಿನ ಚುನಾವಣೆಯಲ್ಲಿ ಘೋಷಣೆ ಮಾಡಿರುವಂತೆ ಹಳೇ ಪಿಂಚಣಿ ಪದ್ದತಿಯನ್ನು ಮರು ಜಾರಿ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಶಿಕ್ಷಕರು ಮತ್ತೊಮ್ಮೆ ಮರಿತಿಬ್ಬೇಗೌಡರಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಮುಖಂಡರಾದ ಬಿಸಲವಾಡಿ ರವಿ, ಆಯೂಬ್ ಖಾನ್, ಕರಿನಂಜನಪುರ ಸ್ವಾಮಿ, ಕಾಲೇಜಿನ ಪ್ರಾಂಶುಪಾಲೆ ಚಂದ್ರಮ್ಮ, ಮಹದೇವಸ್ವಾಮಿ, ದೇವರಾಜು ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net