ಯಳಂದೂರು: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಅವರನ್ನು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಡೇಟಾ ಎಂಟ್ರಿ ಆಪರೇಟರ್ ಗುರುಸ್ವಾಮಿ ನಿಂದಿಸಿದ್ದು, ಆತನನ್ನು ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳಬಾರದು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ ಆಗ್ರಹಿಸಿದ್ದಾರೆ.
ಸರ್ಕಾರಿ ಅಧಿಕಾರಿಯೊಂದಿಗೆ ಈತ ಏರು ದನಿಯಲ್ಲಿ ಮಾತನಾಡಿರುವುದರ ಜತೆಗೆ ಧಮ್ಕಿ ಹಾಕಿದ್ದಾನೆ. ಕಚೇರಿಯ ಮಾಹಿತಿಯನ್ನು ಸೋರಿಕೆ ಮಾಡಿರುವ ಕುರಿತು ಈತನ ವಿರುದ್ಧ ಮೇಲಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಕಾಂತಿ ಏಜೆನ್ಸಿಯವರು ಕೆಲಸದಿಂದ ವಜಾಗೊಳಿಸಿದ್ದಾರೆ. ಆದರೂ ಕೂಡ ಈತ ಸಂಘಟನೆಯ ಸದಸ್ಯರೊಡಗೂಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತನಗೆ ಕೆಲಸ ನೀಡಬೇಕೆಂದು ಒತ್ತಡ ಹೇರುತ್ತಿದ್ದಾನೆ. ಈತನನ್ನು ಮತ್ತೆ ಕೆಲಸಕ್ಕೆ ಮರುನೇಮಕ ಮಾಡಿಕೊಂಡಲ್ಲಿ ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.