

ಚಾಮರಾಜನಗರ : ವಿದ್ಯಾರ್ಥಿಗಳು ಶಿಸ್ತು, ಬದ್ಧತೆಯಿಂದ ನರ್ಸಿಂಗ್ ತರಬೇತಿ ಪಡೆದುಕೊಂಡರೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜೆಎಸ್‌ಎಸ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಜೆಎಸ್‌ಎಸ್ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಗುರುವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಜ್ಯೋತಿ ಬೆಳಗಿಸುವಿಕೆ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನರ್ಸಿಂಗ್‌ನಲ್ಲಿ ಉತ್ತಮ ಉದ್ಯೋಗಾವಕಾಶಗಳಿದ್ದು, ಪ್ರತಿಯೊಬ್ಬರು ಸ್ವಾವಲಂಬಿಗಳಾಗಲು ಇದೊಂದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚು ಒತ್ತು ನೀಡುವ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು. ವಿಷಯಗಳನ್ನು ಶಿಸ್ತು, ಬದ್ಧತೆಯಿಂದ ಕಲಿಯಬೇಕು. ಅಲ್ಲದೇ ಅದನ್ನು ತಮ್ಮ ಜೀವನಕ್ಕೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶುಶ್ರೂಷಕರಾದ ಮೇಲೆ ರೋಗಿಗಳ ಸೇವೆ, ಆರೈಕೆಯನ್ನು ಮಾಡಬೇಕು. ಅವರ ಕಷ್ಟದಲ್ಲಿ ಭಾಗಿಯಾಗುವ ಮೂಲಕ ಅವರಿಗೆ ಮನೋಸ್ಥೆರ್ಯವನ್ನು ತುಂಬಬೇಕು. ಜತೆಗೆ ಅವರ ಜೀವ ಮತ್ತು ಜೀವನವನ್ನು ಸರಿಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ಪ್ರಥಮ ವರ್ಷದ ವಿದ್ಯಾರ್ಥಿಗಳು ದೀಪ ಬೆಳಗಿಸಿ ಪ್ರತಿಜ್ಞಾವಿಧಿಯನ್ನು ಸ್ವೀಕಾರ ಮಾಡಿದರು. ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠದ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್.ಮಹೇಶ್, ಕಾಲೇಜಿನ ಪ್ರಾಂಶುಪಾಲ ಜಿ.ವಿನಯ್ ಕುಮಾರ್ ಹಾಗೂ ಇತರರು ಹಾಜರಿದ್ದರು.