

ಹನೂರು; ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ವಿಧಾನಪರಿಷತ್ ಸದಸ್ಯರಾಗಿ ಜಯಗಳಿಸಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿರುವ ಮರಿತಿಬ್ಬೇಗೌಡ ಅವರನ್ನು ಈ ಬಾರಿಯೂ ಮೊದಲ ಪ್ರಾಶಸ್ತ್ಯದ ಮತ ನೀಡುವುದರ ಮೂಲಕ ಗೆಲ್ಲಿಸುವಂತೆ ಮಾಜಿ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.
ಪಟ್ಟಣದ ಕ್ರಿಸ್ತರಾಜ, ಶ್ರೀ ವಿವೇಕಾನಂದ ಶಿಕ್ಷಣ ಸಂಸ್ಥೆ, ಜಿ.ವಿ. ಗೌಡ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಗುರುವಾರ ಭೇಟಿ ನೀಡಿ, ಮರಿತಿಬ್ಬೇಗೌಡರ ಪರ ಶಿಕ್ಷಕರಲ್ಲಿ ಮತಯಾಚಿಸಿದರು. ಮರಿತಿಬ್ಬೇಗೌಡ ಅವರು 2000 ರಿಂದ 2024ರ ಅವಧಿಯವರೆಗೆ ಸತತ 4 ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿ ಜಯಗಳಿಸಿದ್ದಾರೆ. ಶಿಕ್ಷಕರೊಂದಿಗೆ ಉತ್ತಮ ಒಡನಾಟವನ್ನು ಹೊಂದಿರುವ ಅವರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ ರಾಜಕೀಯ ಜೀವನದುದ್ದಕ್ಕೂ ಶಿಕ್ಷಕರ ಕಷ್ಟ, ಸುಖಗಳಲ್ಲಿ ಭಾಗಿಯಾಗಿದ್ದಾರೆ. ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪರಿಷತ್ತಿನಲ್ಲಿ ಗುಡುಗಿದ್ದಾರೆ. ಇನ್ನು ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಈಗಾಗಲೇ ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಜೂ.3 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಮರಿತಿಬ್ಬೇಗೌಡ ಅವರನ್ನು ಗೆಲ್ಲಿಸಿ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನೂರಿನ ಮುಕುಂದವರ್ಮ, ರಾಮಾಪುರದ ಈಶ್ವರ್, ಪಪಂ ಸದಸ್ಯರಾದ ಗಿರೀಶ್‌ಕುಮಾರ್, ಸುದೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್ ಇತರರಿದ್ದರು.