

ಗುಂಡ್ಲುಪೇಟೆ; ಸಮಾಜ ಹಾಗೂ ಆರೋಗ್ಯಕ್ಕೆ ಮಾರಕವಾದ ತಂಬಾಕು ಮಾರಾಟವನ್ನು ಕಡ್ಡಾಯವಾಗಿ ತಡೆಗಟ್ಟಬೇಕಾಗಿದೆ ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ಜೆ. ಶಿವಕುಮಾರ್ ಹೇಳಿದರು.
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಂಬಾಕು ಸೇವನೆ ಮಾಡುವವರಿಗಿಂತ ಇತರರಿಗೆ ಸಮಸ್ಯೆ ಆಗುತ್ತಿದೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳ ಸಮೀಪದಲ್ಲಿ ಹೆಚ್ಚಿನ ಮಾರಾಟ ಮಾಡಲಾಗುತ್ತಿದ್ದು, ಯುವಜನತೆ ಇದರ ಚಟಕ್ಕೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಇದರ ಮಾರಾಟ ಹಾಗೂ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂಪಾಷ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಂಜುನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ಇತರರು ಇದ್ದರು.