

ಚಾಮರಾಜನಗರ: ಲೋಕಸಭಾ ಚುನಾವಣೆ ಮುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಿದರು. ಕೆಲವು ಅಧಿಕಾರಿಗಳ ಕಾರ್ಯವೈಖರಿಯನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಡಳಿತ ಸಂಬಂಧ ಸಾಕಷ್ಟು ಸಲಹೆ, ಸೂಚನೆಗಳನ್ನು ನೀಡುವ ಜತೆಗೆ ಆಡಳಿತ ಯಂತ್ರಕ್ಕೆ ಬಿಸಿಮುಟ್ಟಿಸುವ ಕೆಲಸ ಮಾಡಿದರು. ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಮತ್ತು ಸಿ.ಪುಟ್ಟರಂಗಶೆಟ್ಟಿ ಕೆಲವು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವರ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಪಶುಸಂಗೋಪನೆ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ಗೊಬ್ಬರವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳಬೇಕು. ಅಲ್ಲದೇ ಯೂರಿಯಾ ಗೊಬ್ಬರವನ್ನು ಬ್ಯಾಗ್ ಬದಲಿಸಿ ತಮಿಳುನಾಡಿಗೆ ಅಕ್ರಮವಾಗಿ ಸಾಗಣೆ ಮಾಡುವ ಪ್ರಕರಣಗಳು ಕಂಡುಬರುತ್ತಿದ್ದು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಿ ಕ್ರಮವಹಿಸಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಖಾಸಗಿ ಅಂಗಡಿಗಳಿಗೆ ಸೂಚನೆ ನೀಡಬೇಕು ಎಂದರು.
ಜಿಲ್ಲೆಯ ಪಟ್ಟಣ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಶಾಶ್ವತ ಕುಡಿಯುವ ನೀರು ಕಲ್ಪಿಸಲು ಕ್ರಮವಹಿಸಬೇಕು. ಕುಡಿಯುವ ನೀರು ಸಮಸ್ಯೆ ಇರುವ ಕಡೆ ಟ್ಯಾಂಕ್ ಮೂಲಕ ನೀರು ಪೂರೈಕೆ ಮಾಡಬೇಕು. ನೀರಿನ ಸಮಸ್ಯೆ ಬಗೆಹರಿಯುವ ತನಕ ಪೂರೈಕೆ ಮಾಡಬೇಕು ಎಂದು ಸೂಚನೆ ನೀಡಿದರು.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿಯಲ್ಲಿ ನೀರು ಸೇವಿಸಿ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಟ್ಯಾಂಕ್, ಜಾಕ್‌ವೆಲ್‌ಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪದ್ಮನಿ ಸಾಹು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.