ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದ ಘೋಷಿಸಿ

11raju5
Published on

ಚಾಮರಾಜನಗರ: ಒಂದು ಕಡೆ ನೆರೆ ಹಾವಳಿಗೆ ಜನರು ತತ್ತರಿಸಿಹೋಗುತ್ತಿದ್ದರೆ, ಮತ್ತೊಂದು ಕಡೆ ಬರಪೀಡಿತ ಪ್ರದೇಶ ಎಂದು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದ ಘೋಷಿಸಿಸುವಂತೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ತೆರಳಿ ಶ್ರೀ ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಎಲ್ಲ ಬೆಳೆಗಳು ನಾಶವಾಗಿ, ರೈತರ ಜೀವನ ಕಷ್ಟಕರವಾಗಿದೆ. ಹಾಗಾಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು. ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆಯಲ್ಲಿ ವಿದ್ಯುತ್ ನೀಡಬೇಕು. ಕಬ್ಬಿಗೆ ಪ್ರತಿ ಟನ್‌ಗೆ 4 ಸಾವಿರ ರೂ. ವೈಜ್ಞಾನಿಕ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತರ ಜಮೀನುಗಳಲ್ಲಿ ಜೋತು ಬಿದ್ದಿರುವ ಲೈನ್‌ಗಳು ಹಾಗೂ ಟ್ರಾನ್ಸ್ ಫಾರ್ಮರ್‌ಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಭಾಗ್ಯಜ್ಯೋತಿ, ಕುಟೀರ ಜ್ಯೋತಿಯ ಬಿಲ್ನ್ನು ಸರ್ಕಾರವೇ ಭರಿಸಬೇಕು. ಅಕ್ರಮ ಗಣಿಗಾರಿಕೆಗಳಿಗೆ ಕಡಿವಾಣ ಹಾಕಬೇಕು. ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ನೀಡಬೇಕು. ತೆಂಗಿಗೆ ವೈಜ್ಞಾನಿಕ ಬೆಂಬಲ ಘೋಷಿಸಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಕಳಪೆ ಯಂತ್ರೋಪಕರಣಗಳನ್ನು ನೀಡುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಎಂ.ಮಹದೇವಸ್ವಾಮಿ, ಹೆಗ್ಗೋಠಾರ ವಿಜಯ್ ಕುಮಾರ್, ಪಾಪು, ಶಿವಬಸವಸ್ವಾಮಿ, ಶಿವಮೂರ್ತಿ, ಮಾದಪ್ಪ, ನಂಜುಂಡಸ್ವಾಮಿ, ಮಲ್ಲೇಶ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net