

ಚಾಮರಾಜನಗರ: ಆಳುವ ಸರ್ಕಾರಗಳು ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿ, ರೈತರ ಆತ್ಮಹತ್ಯೆಗೆ ಕಾರಣವಾಗುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ರೈತ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಮಂಡಿಸಿರುವ ಈ ಬಾರಿಯ ಬಜೆಟ್ ಕೃಷಿ ಕ್ಷೇತ್ರಕ್ಕೆ ಆಘಾತ ಉಂಟುಮಾಡಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೀರಾವರಿ, ಸಹಕಾರ ಹಾಗೂ ಕೃಷಿ ಕ್ಷೇತ್ರಕ್ಕೆ ಸುಮಾರು 10 ಸಾವಿರ ಕೋಟಿ ರೂ. ಅನುದಾನವನ್ನು ಕಡಿತ ಮಾಡಿದ್ದಾರೆ. ಹಸಿದವರಿಗೆ ಅನ್ನ ನೀಡದೆ, ಹಣ ನೀಡಲು ಸಾಧ್ಯವೇ ಎಂಬ ಮಾತುಗಳನ್ನಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡಲು ಮುಂದಾಗುವ ಮೂಲಕ ರೈತರು ಹಾಗೂ ಜನಸಾಮಾನ್ಯರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ರೈತರು ಬೆಳೆಯುತ್ತಿರುವ ರಾಗಿ, ಜೋಳ, ಭತ್ತವನ್ನು ಬೆಂಬಲ ಬೆಲೆ ನೀಡಿ ಖರೀದಿಸಿ, ಅನ್ನಭಾಗ್ಯ ಯೋಜನೆಗೆ ಬಳಕೆ ಮಾಡಿಕೊಳ್ಳಬಹುದಾಗಿತ್ತು. ಟೊಮ್ಯಾಟೋ ಬೆಲೆ ಗಗನಕ್ಕೆ ಏರಿದೆ ಎಂದು ಬಾಯಿ ಬಡಿದುಕೊಳ್ಳುವವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರಾ? ಗೋಹತ್ಯೆ ನಿಷೇಧ ಕುರಿತು ಸಚಿವರು ಆವೇಶದ ಹೇಳಿಕೆ ನೀಡುತ್ತಾರೆ. ಗೋವು ರೈತರ ಜೀವನಾಡಿಯಾಗಿದೆ. ಈ ಕುರಿತು ರೈತಸ್ನೇಹಿ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕಾಗುತ್ತದೆ. ದೇಶದ ಸ್ವಾತಂತ್ರೃ ಅಮೃತ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಆದರೆ ಇಂದಿಗೂ ರೈತರ ಆತ್ಮಹತ್ಯೆಗಳನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ 70 ಲಕ್ಷ ಮಿಲಿಯನ್ ಟನ್ ಆಹಾರ ಉತ್ಪಾದನೆ ಮಾಡಲಾಗುತ್ತಿತ್ತು. ಈಗ 330 ಲಕ್ಷ ಮಿಲಿಯನ್ ಟನ್ ಆಹಾರ ಉತ್ಪಾದನೆ ಮಾಡಿದರೂ ರೈತ ವಿರೋಧಿ ಧೋರಣೆಯಿಂದ ರೈತ ಸಂಕಷ್ಟದ ಜೀವನ ನಡೆಸುತ್ತಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಡಂಚಿನ ಗ್ರಾಮಗಳಲ್ಲಿ ರೈತರು ಕಾಡುಪ್ರಾಣಿಗಳಿಂದ ತುಂಬ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಅಧಿಕಾರಿಗಳು ಶ್ರೀಮಂತರ ಮೋಜಿನ ತಾಣಗಳನ್ನು ನಿರ್ಮಿಸಲು ಕಾಡಂಚಿನ ಭಾಗದ ಜನರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ರಾಜ್ಯದ ಸಂಸದರು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಈ ಎಲ್ಲದರ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕಾನೂನು ಉಳಿಸಿ, ಅನ್ನಭಾಗ್ಯ ಯೋಜನೆಗೆ ರಾಜ್ಯದ ರೈತರಿಂದ ಅಕ್ಕಿ, ರಾಗಿ, ಸಿರಿಧಾನ್ಯ ಖರೀದಿಸಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಪ್ಪಿಸಿ ಎಂಬಿತ್ಯಾದಿ ಹಕ್ಕೊತ್ತಾಯಗಳೊಂದಿಗೆ ರೈತ ಸಮಾವೇಶ ಆಯೋಜಿಸಿದ್ದು, ಸರ್ಕಾರಗಳು ನಮ್ಮ ಮನವಿಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ನಿವೃತ್ತ ಪ್ರಾಧ್ಯಾಪಕ ಶಿವರಾಜಪ್ಪ, ಪರಿಸರವಾದಿ ಪುಣಜನೂರು ದೊರೆಸ್ವಾಮಿ, ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಬಿ.ಸೋಮಶೇಖರ್, ಹಾಲಿನ ನಾಗರಾಜ್, ಮಲೆಯೂರು ಹರ್ಷ, ಪ್ರವೀಣ್, ಬಸವರಾಜಪ್ಪ, ಕುರುಬೂರು ಸಿದ್ದೇಶ್, ಯರಿಯೂರು ಮಹೇಶ್, ಉಡಿಗಾಲ ಮಂಜುನಾಥ್, ಮಹದೇವಸ್ವಾಮಿ ಇತರರು ಉಪಸ್ಥಿತರಿದ್ದರು.