ಇಂದಿನ ಮಕ್ಕಳೇ ದೇಶದ ನಾಳಿನ ಭವಿಷ್ಯ

Published on

ಗುಂಡ್ಲುಪೇಟೆ: ಇಂದಿನ ಮಕ್ಕಳೇ ಭಾರತದ ನಾಳಿನ ಭವಿಷ್ಯವಾಗಿದ್ದು, ಅಂತಹ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.

ಗುಂಡ್ಲುಪೇಟೆ ಪಟ್ಟಣದ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 14 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಪಾಲಕರು ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಆದರೆ, ಅಜ್ಞಾನ, ಅನಕ್ಷರತೆ, ಬಡತನ ಮುಂತಾದ ಕಾರಣಗಳಿಂದ ಕೆಲವರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸುತ್ತಿದ್ದಾರೆ. ಇದರಿಂದ ಆ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಅಲ್ಲದೆ ಬಾಲ್ಯದಲ್ಲಿಯೇ ತಪ್ಪು ಸಹವಾಸದಿಂದ ಸಮಾಜಘಾತುಕರಾಗುವ ಅಪಾಯವಿದೆ. ಸರ್ಕಾರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ರೂಪಿಸಿದ್ದು, ಇದರಲ್ಲಿ ಬಾಲಕಾರ್ಮಿಕರಿಂದ ದುಡಿಸುವವರಿಗೆ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ಜೆ.ಶಿವಕುಮಾರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕಾಂತಮ್ಮ, ಕಾರ್ಮಿಕ ನಿರೀಕ್ಷಕ ನಾರಾಯಣಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ, ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ರಾಜಶೇಖರ್, ಸಿಎಂಐ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕ ಫಾ. ರೇಜೇಶ್ ಪುತಿಯ ಪರಂಬಿಲ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net