ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ

12rajesh11
Published on

ಚಾಮರಾಜನಗರ: ಸಾಮಾಜಿಕ ಪಿಡುಗು ಆಗಿರುವ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ತಿಳಿಸಿದರು.

ನಗರದ ವರನಟ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

14ವರ್ಷದೊಳಗಿನ ಮಕ್ಕಳನ್ನು ಯಾವುದೇ ದುಡಿಮೆಗೆ ನೇಮಿಸಿಕೊಳ್ಳುವಂತಿಲ್ಲ. ಮಕ್ಕಳು ಶಾಲೆ ಬಿಟ್ಟು ದುಡಿಮೆಗೆ ಹೋಗುತ್ತಿದ್ದರೆ ಮಾಹಿತಿ ನೀಡಬೇಕು. ಮಕ್ಕಳಿಗೆ ಕಡ್ಡಾಯ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಒದಗಿಸಲಾಗಿದೆ. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಮಾತನಾಡಿ, ಪ್ರತಿ ವರ್ಷ ಜೂ.12 ಅನ್ನು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಉದ್ದೇಶ ಮಕ್ಕಳನ್ನು ದುಡಿಮೆಗೆ ತೊಡಗಿಸಿಕೊಳ್ಳುವುದರಿಂದ ಅವರ ಭವಿಷ್ಯ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬುದನ್ನು ಮನವರಿಕೆ ಮಾಡುವುದಾಗಿದೆ ಎಂದರು.

ಮಕ್ಕಳಿಗೆ ವಿದ್ಯೆ ತುಂಬ ಮುಖ್ಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಮಕ್ಕಳು ದುಡಿಯುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು. ಶಿಕ್ಷಣಕ್ಕೆ ಮಹತ್ವ ನೀಡಿ ಬಾಲಕಾರ್ಮಿಕ ಪದ್ಧತಿ ತಡೆಯಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಯಾದರೆ ಇತರ ಅಭಿವೃದ್ಧಿಯೂ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, ಶಾಲೆ ಬಿಟ್ಟ ಮಕ್ಕಳ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೂ ಸೇರಿದಂತೆ ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಸೌಲಭ್ಯ ಕಲ್ಪಿಸಬೇಕು. ಚಿಕ್ಕ ವಯಸ್ಸಿನಲ್ಲಿ ದುಡಿಮೆಗೆ ದೂಡದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ಎಂ.ಸವಿತಾ ಮಾತನಾಡಿ, ಬಾಲಕಾರ್ಮಿಕ ಪದ್ಧ್ದತಿಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ನಾವೆಲ್ಲ ಶ್ರಮಿಸಬೇಕು ಎಂದರು.

ಬಾಲ ನ್ಯಾಯ ಮಂಡಳಿಯ ಸದಸ್ಯ ಟಿ.ಜೆ.ಸುರೇಶ್ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮೊದಲು ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್, ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಪ್ರಸನ್ನ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪದ್ಮಜಾ, ಹಿರಿಯ ಭೂ ವಿಜ್ಞಾನಿ ಧನಲಕ್ಷ್ಮೀ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕಿ ಮಂಜುಳಾ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಎಂ. ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net