ಆರೋಗ್ಯ ಇಲಾಖೆ ಜತೆ ಸಾರ್ವಜನಿಕರು ಕೈ ಜೋಡಿಸಲಿ

13-GPT-1
Published on

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯನ್ನು ಮಲೇರಿಯಾಮುಕ್ತಗೊಳಿಸಲು ಆರೋಗ್ಯ ಇಲಾಖೆಯು ಸಿದ್ಧತೆ ನಡೆಸಿದ್ದು, ಸಾರ್ವಜನಿಕರು ಇಲಾಖೆ ಜತೆ ಕೈಜೋಡಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಹರೀಶ್‌ಕುಮಾರ್ ಮನವಿ ಮಾಡಿದರು.

ತಾಲೂಕಿನ ತೆರಕಣಾಂಬಿ ಗ್ರಾಮದ ಬಲಚವಾಡಿ ಪುಟ್ಟಬಸಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆರೋಗ್ಯ ಇಲಾಖೆಯಿಂದ ಮಲೇರಿಯ ವಿರೋಧಿ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯು ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ಒಂದೇ ಒಂದು ಮಲೇರಿಯಾ ಪ್ರಕರಣವೂ ಇಲ್ಲದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಇತ್ತೀಚೆಗೆ ಮಳೆಗಾಲ ಆರಂಭವಾಗಿದ್ದು, ನೀರು ನಿಲ್ಲುವ ಸ್ಥಳಗಳಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಹೆಚ್ಚಿಸಿಕೊಳ್ಳುತ್ತವೆ. ಇವುಗಳ ಕಡಿತದಿಂದ ಜನರಿಗೆ ಮಲೇರಿಯಾ ಮುಂತಾದ ರೋಗಲಕ್ಷಣಗಳು ಕಂಡುಬರುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ನೈರ್ಮಲ್ಯ ಕಾಪಾಡುವ ಜತೆಗೆ ಸೊಳ್ಳೆಕಡಿತದಿಂದ ರಕ್ಷಣೆ ಪಡೆದುಕೊಳ್ಳಬೇಕು. ಜ್ವರ ಮುಂತಾದ ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ಭಯಪಡದೆ ಹತ್ತಿರದ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net