27ರಂದು ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ

18rajesh3
Published on

ಚಾಮರಾಜನಗರ: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಜೂ.27ರಂದು ನಗರದಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜನ್ಮದಿನ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರಿಂದ ಕಾರ್ಯಕ್ರಮ ಕುರಿತು ಸಲಹೆ, ಅಭಿಪ್ರಾಯ, ಅನಿಸಿಕೆಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆಲಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಜೂ.27ರಂದು ಬೆಳಗ್ಗೆ 9.30 ಗಂಟೆಗೆ ನಗರದ ಶ್ರೀಚಾಮರಾಜೇಶ್ವರ ದೇವಾಲಯದಿಂದ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಆರಂಭವಾಗಲಿದೆ. ಜಿಲ್ಲಾಡಳಿತ ಭವನದವರೆಗೆ ನಡೆಯುವ ಮೆರವಣಿಗೆಯಲ್ಲಿ ಬೆಳ್ಳಿ ರಥದಲ್ಲಿ ಅಲಂಕರಿಸಿದ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಇರಿಸಲಾಗುತ್ತದೆ. ಮೆರವಣಿಗೆಯಲ್ಲಿ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಬಳಿಕ ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮೆರವಣಿಗೆಗೆ ಅಗತ್ಯ ಬಂದೋಬಸ್ತ್ ಅನ್ನು ಪೊಲೀಸ್ ಇಲಾಖೆಯಿಂದ ಕಲ್ಪಿಸಲಾಗುವುದು. ಕಾರ್ಯಕ್ರಮದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುದರ್ಶನ್, ತಾಲೂಕು ಸಮಾಜದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಗೌರವಾಧ್ಯಕ್ಷ ಸುದರ್ಶನಗೌಡ, ಪ್ರಧಾನ ಕಾರ್ಯದರ್ಶಿ ನಾಗೇಂದ್ರೇಗೌಡ, ಮಹೇಶ್‌ಗೌಡ, ಚಾ.ರಂ.ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಮಂಜುನಾಥಗೌಡ, ಚಿಕ್ಕರಂಗೇಗೌಡ, ರಾಘವೇಂದ್ರ, ಆಲೂರು ನಾಗೇಂದ್ರ, ಎಸ್. ಚಂದ್ರೇಗೌಡ, ಲೋಕೇಶ್, ಚಿನ್ನಸ್ವಾಮಿ, ಭೈರೇಗೌಡ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net