ರಾಜ್ಯ ಸರ್ಕಾರದ ವಿರುದ್ಧ ಹೆಚ್ಚಿದ ಆಕ್ರೋಶ

20rajesh1
Published on

ಚಾಮರಾಜನಗರ : ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಜಿಲ್ಲೆಯಾದ್ಯಂತ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು, ಯಳಂದೂರು, ಗುಂಡ್ಲುಪೇಟೆ ತಾಲೂಕು ಕೇಂದ್ರಗಳಲ್ಲಿ ಹಾಗೂ ಸಂತೇಮರಹಳ್ಳಿ ಹೋಬಳಿ ಕೇಂದ್ರದಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ದಿನಬಳಕೆ ವಸ್ತುಗಳು ಹಾಗೂ ಆಹಾರ ಸಾಮಗ್ರಿಗಳ ಬೆಲೆಯಲ್ಲೂ ಏರಿಕೆಯಾಗಿದೆ. ಇದರಿಂದಾಗಿ ಸಾಮಾನ್ಯ ಜನರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಇಂಧನ ದರ ಏರಿಕೆ ಖಂಡಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಕುದುರೆ ಸಾರೋಟು ಮೂಲಕ ಮೆರವಣಿಗೆಯಲ್ಲಿ ಸಾಗಿ ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.50 ರೂ. ಏರಿಕೆ ಮಾಡಿರುವುದು ಖಂಡನೀಯ. ತೈಲಬೆಲೆ ಏರಿಕೆಯಿಂದ ಇತರ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸಲು ತೊಂದರೆಯಾಗುತ್ತದೆ. ಕೂಡಲೇ ಬೆಲೆ ಏರಿಕೆ ಇಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಭೆಂದ್ರಪ್ಪ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸೂರ್ಯಕುಮಾರ್, ಟೌನ್ ಅಧ್ಯಕ್ಷ ಶಿವರಾಜು, ಮಾಧ್ಯಮ ಸಂಚಾಲಕ ವೀರೇಂದ್ರ, ಮಾಧ್ಯಮ ಸಹ ವಕ್ತಾರ ಎನ್.ಮಂಜುನಾಥ್, ಪದಾಧಿಕಾರಿಗಳಾದ ಆನಂದ್ ಭಗೀರಥ, ಮಹೇಶ್, ಗುರು, ಕಿರಣ್, ರಂಗಸ್ವಾಮಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net