ರಾಹುಲ್‌ಗಾಂಧಿ ವಜಾ ಖಂಡಿಸಿ ಮೌನ ಪ್ರತಿಭಟನೆ

048
Published on

ಚಾಮರಾಜನಗರ: ಕಾಂಗ್ರೆಸ್ ಯುವ ನಾಯಕ ರಾಹುಲ್‌ಗಾಂಧಿ ಸಂಸದ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು, ನಂತರ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿರೋಧ ಪಕ್ಷಗಳನ್ನು ಕಡೆಗಣಿಸುವುದಲ್ಲದೇ, ವಿರೋಧ ಪಕ್ಷದ ಮುಖಂಡರಿಗೆ ವಿವಿಧ ಬಗೆಯಲ್ಲಿ ತೊಂದರೆ ಕೊಡುತ್ತಿದೆ. ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ 2 ವರ್ಷ ಶಿಕ್ಷೆಯಾಗುವ ರೀತಿ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ನಡೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರು ಕಳೆದ ಬಾರಿ ರಾಜ್ಯದಲ್ಲಿ ಆಡಳಿತ ನಡೆಸಿದರು, ಅಭಿವೃದ್ಧಿಯ ಬಗ್ಗೆ ಚೂರು ಮಾತನಾಡಲಿಲ್ಲ ಬದಲಾಗಿ ಅಲ್ಲಿ ಸಾವಾಯಿತು, ಕೊಲೆಯಾಯಿತು ಎನ್ನುತ್ತಾ ಭಾವನಾತ್ಮಕ ವಿಚಾರದ ಮೇಲೆ ರಾಜಕೀಯ ಮಾಡಿಕೊಂಡು ಕಾಲ ಕಳೆದರು.ಅವರ ವಿಚಾರಗಳಿಂದಲೇ ಈಗ ವಿರೋಧ ಪಕ್ಷದಲ್ಲಿ ಕೂರುವ ಸ್ಥಿತಿ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹಂತಹಂತವಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಮಾಡುತ್ತಿದೆ. ಜನರು ಸಹ ಅದರ ಅನುಕೂಲಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಟೀಕೆ ಮಾಡುವ ಜತೆಗೆ, ಸಾವಿನ ರಾಜಕೀಯವನ್ನು ಮುಂದುವರಿಸಿದ್ದಾರೆ ಎಂದು ಕಿಡಿ ಕಾರಿದರು.

ಜೈನಮುನಿಗಳ ಹತ್ಯೆ ಹಾಗೂ ಟಿ.ನರಸೀಪುರದಲ್ಲಿ ನಡೆದ ಯುವಕನ ಕೊಲೆ ವೈಯಕ್ತಿಕ ವಿಚಾರಗಳಿಗೆ ನಡೆದ ಕೊಲೆಯಾಗಿದೆ. ಇದನ್ನು ಸರ್ಕಾರದ ತಲೆಗೆ ಕಟ್ಟುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ, ಬಡತನ ಹಾಗೂ ಇನ್ನಿತರೆ ವಿಚಾರಗಳನ್ನು ಇಟ್ಟುಕೊಂಡು ಹೋರಾಟ ಮಾಡಬೇಕಿದ್ದ ವಿರೋಧ ಪಕ್ಷಗಳು ಕ್ಷುಲ್ಲಕ ಸಾವಿನ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಚಿಕ್ಕಮಾಧು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ತೋಂಟೇಶ್, ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್, ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್, ನಾಗರಾಜ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net