

ಚಾಮರಾಜನಗರ: ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.
ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನವು ಜೂ.23ರವರೆಗೆ ಶೇ.97.83ರಷ್ಟು ಸಾಧನೆ ಮಾಡಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. 2,71,522 ಲಾನುಭವಿಗಳಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳಂತೆ 543.44 ಕೋಟಿ ರೂ. ಪಡೆಯುತ್ತಿದ್ದಾರೆ ಎಂದು ವಿವರಿಸಿದರು. ಇದಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, ಅನ್ನಭಾಗ್ಯ ಯೋಜನೆ ಅನುಷ್ಠಾನದಲ್ಲಿ ಚಾಮರಾಜನಗರ ಜಿಲ್ಲೆ 5ನೇ ಸ್ಥಾನದಲ್ಲಿದೆ. ಒಟ್ಟು 8 ಲಕ್ಷ ಜನ ಲಾನುಭವಿಗಳಿದ್ದಾರೆ. ಇವರಿಗೆ 125 ಕೋಟಿ ರೂ.ಗಳನ್ನು ಸರ್ಕಾರ ನೀಡುತ್ತಿದೆ. 7,750 ಪಡಿತರ ಚೀಟಿಗಳು, 20,029 ಲಾನುಭವಿಗಳು ಯೋಜನೆಯಿಂದ ಹೊರಗುಳಿದಿದ್ದಾರೆ. ಇವರಿಗೂ ಇಕೆವೈಸಿ ಮಾಡಿಸಿದರೆ ಶೇ.100ರಷ್ಟು ಗುರಿ ಸಾಧನೆಯಾಗಲಿದೆ. ಗೃಹ ಜ್ಯೋತಿ ಯೋಜನೆಯಡಿ 2,62,572 ವಿದ್ಯುತ್ ಸ್ಥಾವರಗಳಿವೆ. 2,61,339 ಲಾನುಭವಿಗಲಿದ್ದಾರೆ ಎಂದು ಹೇಳಿದರು.
ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಮಾತನಾಡಿ, ಶಕ್ತಿ ಯೋಜನೆ ಜಾರಿ ಬಂದ ಬಳಿಕ 5.14 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ. 44 ಹೊಸ ಬಸ್‌ಗಳು ಬಂದಿದ್ದು, 35 ಬಸ್‌ಗಳು ಬೇಕಾಗಿವೆ. ಹನೂರಿನಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪನೆ ಮಾಡಬೇಕಿದೆ ಎಂದು ತಿಳಿಸಿದರು. ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಅಕ್ಬರ್ ಯುವನಿಧಿ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಲಾಯಿತು. ಈ ವೇಳೆ ಸಮಿತಿ ಅಧ್ಯಕ್ಷ ಹೊಂಗನೂರು ಚಂದ್ರು ಮಾತನಾಡಿ, ಸರ್ಕಾರದ ಯೋಜನೆಯನ್ನು ಜನರಿಗೆ ತಲುಪಿಸಲು ಶ್ರಮಿಸಲಾಗುವುದು ಎಂದರು. ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಗ್ಯಾರಂಟಿ ಯೋಜನೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿಕೊಡಲಿದೆ. ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲರೂ ಗಮನಹರಿಸಿ ಎಂದು ಸೂಚನೆ ನೀಡಿದರು. ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್‌ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಇತರರು ಇದ್ದರು.