ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ

25rajesh11
Published on

ಚಾಮರಾಜನಗರ : ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯಕವಾಗಿದೆ ಎಂದು ಮಾನಸ-ಸಿಕ್ರಂ ಸಂಸ್ಥೆ ರಾಜ್ಯ ಸಂಯೋಜಕ ಭೀಮಪ್ಪ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಮಾನಸ-ಸಿಕ್ರಂ ಸಂಸ್ಥೆ, ಜಿಲ್ಲಾ ಸಂಪನ್ಮೂಲ ಕೇಂದ್ರದಿಂದ ಅಂಗನವಾಡಿ ನೌಕರರಿಗೆ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಪೋಕ್ಸೋ ಕಾಯಿದೆಗೆ ಒಳಪಡುತ್ತದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಕಾನೂನು ಅರಿವು ಹೊಂದಿದ್ದರೆ ಮಕ್ಕಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗುತ್ತದೆ. ಈ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಮಕ್ಕಳ, ಮಹಿಳೆಯರ ಹಕ್ಕುಗಳ, ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಸಿಕ್ರಂ ಸಂಸ್ಥೆಯ ಜಿಲ್ಲಾ ಸಂಯೋಜಕ ಕೆ.ಸಿ.ರೇವಣ್ಣ ಮಾತನಾಡಿ, ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹಕ್ಕು, ಕರ್ತವ್ಯಗಳಿವೆ ಅವುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಲಾಗುತ್ತಿದೆ ಎಂದರು.

ಜನಶಕ್ತಿ ಹೋರಾಟ ಸಮಿತಿ ಅಧ್ಯಕ್ಷ ರಾಮಸಮುದ್ರ ಸುರೇಶ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮಹಿಳೆಯರ ಅನೇಕ ಕಾನೂನು ಜಾರಿಗೆ ತಂದಿದ್ದಾರೆ. ನಾಲ್ಕು ಗೋಡೆಗೆ ಸೀಮಿತವಾಗಿದ್ದ ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿ ತೊಡಗಿಕೊಂಡು ಯಶ್ವಸಿಯಾಗಿದ್ದು, ಮಹಿಳೆ ಅಬಲೆಯಲ್ಲ ಸಬಲೆ ಎಂಬುವುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾಳೆ ಎಂದರು. ಕಾರ್ಯಕ್ರಮದಲ್ಲಿ ವಕೀಲರಾದ ಚಂದ್ರಕಾಂತ್, ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ, ಅಂಗನವಾಡಿ ಕಾರ್ಯಕರ್ತೆ ಪದ್ಮಜಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net