ಜು. 10 ರಂದು ಕಾಂಗ್ರೆಸ್ ಕೃತಜ್ಞತಾ ಸಮಾವೇಶ

07rajesh5
Published on

ಚಾಮರಾಜನಗರ: ಚಾ.ನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಜು. 10 ರಂದು ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು 1.88 ಲಕ್ಷ ಮತಗಳ ಅಂತರದಲ್ಲಿ ಕ್ಷೇತ್ರದ ಮತದಾರರು ಗೆಲ್ಲಿಸಿದ್ದಾರೆ. 8 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಲೋಕಸಭಾ ಕ್ಷೇತ್ರದ ಕೇಂದ್ರ ಸ್ಥಾನದಲ್ಲಿ ಮತದಾರರಿಗೆ ಕೃತಜ್ಞತೆ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಚಾಮರಾಜನಗರ ಜಿಲ್ಲೆ ಹಾಗೂ ಎಲ್ಲಾ ಕ್ಷೇತ್ರದಿಂದ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ , ಸಂಸದ ಸುನೀಲ್ ಬೋಸ್, ಮೈಸೂರು ಹಾಗೂ ಚಾ.ನಗರ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಇದೊಂದು ಐತಿಹಾಸಿಕ ಸಮಾವೇಶವಾಗಿದ್ದು, 8 ವಿಧಾನಸಭಾ ಕ್ಷೇತ್ರಗಳ ಮತದಾರರು ಜಿಲ್ಲಾ ಕೇಂದ್ರದಲ್ಲಿ ಸಮಾವೇಶಗೊಳ್ಳಲಿದ್ದಾರೆ. ಇದಕ್ಕಾಗಿ ಇನ್ನು ಮೂರು ದಿನಗಳ ಕಾಲಾವಕಾಶದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸುವ ಜತೆಗೆ ಹೆಚ್ಚಿನ ಜನರು ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್. ಮಹದೇವ್, ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷ ಹಾಗೂ ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಪದ್ಮ ಪುರುಷೋತ್ತಮ್, ಶಿವಕುಮಾರ್, ಸೈಯದ್ ರಫಿ. ಎಎಚ್‌ಎನ್ ಖಾನ್, ಬಿಸಲವಾಡಿ ರವಿ, ವಡ್ಡರಹಳ್ಳಿ ಶೇಖರಪ್ಪ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net