ಬರ ಪರಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ

10rajesh1
Published on

ಚಾಮರಾಜನಗರ : ಬರ ಪರಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಜನನ ಮಂಟಪದ ಬಳಿ ಬುಧವಾರ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಡಳಿತ ಭವನದ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಕೃಷಿ ಪಂಪ್‌ಸೆಟ್‌ಗಳ ಅನಧಿಕೃತ ವಿದ್ಯುತ್ ಸಂಪರ್ಕವನ್ನು ಅಧಿಕೃತಗೊಳಿಸಬೇಕು. ಹೊಸ ಸಂಪರ್ಕ ಪಡೆಯಲು ರೈತರೇ ಪೂರ್ಣ ವೆಚ್ಚವನ್ನು ಭರಿಸಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು. ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯ ಪೂರ್ಣ ಮೊತ್ತವನ್ನು ಕೇಂದ್ರ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಮೂಲಕ ರೈತರಿಗೆ ಪೂರ್ಣ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಡಿ ರೈತರು ವಿವಿಧ ಬೆಳೆ ವಿಮೆ ಪಾಲಿಸಿ ಕಟ್ಟಿದ್ದು ವಿಮಾ ಕಂಪನಿಯವರು ರೈತರ ಖಾತೆಗೆ ಪರಿಹಾರದ ಮೊತ್ತವನ್ನು ಕೂಡಲೇ ಪಾವತಿಸಬೇಕು. ರೈತರು ಬೆಳೆದ ಎಲ್ಲ ಬೆಳೆಗಳಿಗೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ವಿಸ್ತರಿಸಬೇಕು. ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ರೈತರಿಗೆ ನೋಟಿಸ್ ನೀಡಿ ಬಲವಂತವಾಗಿ ಸಾಲವನ್ನು ನವೀಕರಣ ಮಾಡುತ್ತಿದ್ದು, ಈ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು. ಸತ್ತೇಗಾಲದ ಜಾಗೇರಿ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜಿಲ್ಲೆಯ 5 ತಾಲೂಕಿನ ಅರಣ್ಯದಂಚಿನ ಪ್ರದೇಶದ ಕಂದಾಯ ಭೂಮಿಗಳಲ್ಲಿ ಬಹಳ ಹಿಂದಿನಿಂದಲೂ ಸಾಗುವಳಿ ಮಾಡುತ್ತಿರುವ ರೈತರಿಗೆ ಶೀಘ್ರವೇ ಹಕ್ಕುಪತ್ರ ನೀಡಬೇಕು. ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಯಂತ್ರಿಸಬೇಕು. ವನ್ಯಜೀವಿಗಳಿಂದ ರೈತರಿಗೆ ಉಂಟಾಗುವ ಬೆಳೆ, ಆಸ್ತಿ, ಪ್ರಾಣಹಾನಿಗೆ ಹೆಚ್ಚಿನ ಪರಿಹಾರವನ್ನು ಸಕಾಲದಲ್ಲಿ ಪಾವತಿಸಬೇಕು. ವನ್ಯಜೀವಿಗಳಿಂದ ಸಾವಿಗೀಡಾದ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ದೊರಕಿಸಿಕೊಡಬೇಕು. ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಸಾಗುವಾನಿ ಮರಗಳನ್ನು ಕಟಾವು ಮಾಡುವ ಅನುಮತಿಯನ್ನು ಸರಳೀಕರಣಗೊಳಿಸಬೇಕು. ರೈತರ ವಿರುದ್ಧ ಹೂಡಿರುವ ಚಳವಳಿ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ರಾಜ್ಯ ಕಾಯಂ ಸದಸ್ಯ ಮಹೇಶ್ ಕುಮಾರ್, ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಭಾಸ್ಕರ, ಜಿಲ್ಲಾ ಆಹ್ವಾನಿತ ಸದಸ್ಯರಾದ ಸಿ.ಸಿದ್ದರಾಜು, ಹೆಬ್ಬಸೂರು ಬಸವಣ್ಣ, ಕಾರ್ಯಾಧ್ಯಕ್ಷ ಶೈಲೇಂದ್ರ, ಎಂ.ಲೋಕೇಶ್, ಚಿನ್ನಸ್ವಾಮಿ ಗೌಂಡರ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net