

ಚಾಮರಾಜನಗರ: ರಾಜ್ಯ ಮಹಿಳಾ ಆಯೋಗಕ್ಕೆ ಚಾಮರಾಜನಗರ ಜಿಲ್ಲೆಯಿಂದ 4 ದೂರುಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ನಗರದ ಹೊರವಲಯದ ಬೇಡರಪುರದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯ ಸುವರ್ಣ ಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಮಹಿಳೆಯರ ಅಭಿವೃದ್ಧಿ ಹಾಗೂ ಸ್ವಾವಲಂಬನೆ ಕುರಿತು ವಿದ್ಯಾರ್ಥಿನಿಯರೊಂದಿಗೆ ಗುರುವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳಾ ಆಯೋಗಕ್ಕೆ ಸ್ವೀಕೃತವಾಗುವ ದೂರುಗಳನ್ನು ಗಮನಿಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಿಂದಲೂ 4 ದೂರುಗಳು ದಾಖಲಾಗಿವೆ. ಹೆಣ್ಣುಮಕ್ಕಳಿಗೆ ಮೊಬೈಲ್ ಮಾರಕವಾಗಿ ಪರಿಣಮಿಸುತ್ತಿದೆ. ಸೈಬರ್ ಕ್ರೈಂನಂತಹ ದುಷ್ಕೃತ್ಯಗಳಿಗೆ ಹೆಣ್ಣುಮಕ್ಕಳೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಫೇಕ್ ಅಕೌಂಟ್‌ಗಳಿಂದ ಮೋಸ ಹೋಗುತ್ತಿದ್ದಾರೆ. ಇದು ತಪ್ಪಬೇಕು. ಮಹಿಳೆಯರು ಮೊಬೈಲ್‌ಗಳಿಂದ ಪ್ರಭಾವಿತರಾಗದೆ ಸಕಾರಾತ್ಮಕ ಚಿಂತನೆಗಳಿಗೆ ಅದ್ಯತೆ ನೀಡಬೇಕು. ಸದೃಢ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರಿಗೆ ಸಮಾಜದಲ್ಲಿ ಯಾವುದೇ ಬಗೆಯ ದೌರ್ಜನ್ಯಗಳಾದರೂ ನೇರವಾಗಿ ಪೊಲೀಸರಿಗೆ ದೂರು ನೀಡಬೇಕು. ಪೊಲೀಸರು ಸಹ ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಜನಸ್ನೇಹಿಯಾಗಿರುವ ಪೊಲೀಸ್ ಠಾಣೆಗಳು ಮಹಿಳಾಸ್ನೇಹಿಯಾಗಿಯೂ ಕಾರ್ಯನಿರ್ವಹಿಸಬೇಕು. ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ಆತ್ಮವಿಶ್ವಾಸ ತುಂಬಬೇಕು. ಪೊಲೀಸ್ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಐ.ಸಿ.ಸಿ (ಇಂಟರ್‌ನಲ್ ಕಂಪ್ಲೈಟ್ ಕಮಿಟಿ) ಇರಬೇಕು. ಹೆಣ್ಣುಮಕ್ಕಳು ದೌರ್ಜನ್ಯ, ಹಿಂಸೆಗೊಳಗಾದಾಗ ಐಸಿಸಿ ಸಮಿತಿಯಲ್ಲಿ ದೂರು ದಾಖಲಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, ಮಹಿಳೆಯರ ರಕ್ಷಣೆ, ಸ್ವಾವಲಂಬನೆ, ಲಿಂಗ ಸಮಾನತೆ ಮೊದಲು ಮನೆಯಿಂದಲೇ ಆರಂಭವಾಗಬೇಕು. ಹಿಂದೆ ಸಾಕಷ್ಟು ಅವಕಾಶಗಳಿರಲಿಲ್ಲ. ಇಂದು ಅವಕಾಶಗಳು ವಿಪುಲವಾಗಿದೆ. ಜಿಲ್ಲೆಯ ಉನ್ನತ ಅಧಿಕಾರಿದಲ್ಲಿರುವವರು ಮಹಿಳೆಯರೇ ಆಗಿದ್ದಾರೆ. ಇದಕ್ಕೆ ಕಠಿಣ ಪರಿಶ್ರಮ ಅತ್ಯಗತ್ಯವಾಗಿದೆ. ಜಿಲ್ಲೆಯಲ್ಲಿ ಬಾಲ್ಯವಿವಾಹ, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಜರುಗಿದರೆ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ ಸಂ. 1077ಕ್ಕೆ ಕರೆ ಮಾಡಿ ತಿಳಿಸಿ. ತಕ್ಷಣ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಾರಿಗೆ ಸೌಲಭ್ಯದ ಕೊರತೆ: ಸಂವಾದದ ಬಳಿಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಕಾಲೇಜಿನ ವಿದ್ಯಾರ್ಥಿನಿಯರಿಂದ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿದರು. ನಂತರ ವಿಶ್ವವಿದ್ಯಾಲಯದ ಆವರಣದಲ್ಲಿರುವ ಮಹಿಳೆಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದರು. ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳ ಬಗ್ಗೆ ಅಲ್ಲಿನ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದರು. ವಿದ್ಯಾರ್ಥಿನಿಲಯದಲ್ಲಿ ನೀಡುವ ಊಟ, ಉಪಾಹಾರ ಗುಣಮಟ್ಟದಿಂದ ಕೂಡಿಲ್ಲ. ವಿದ್ಯಾರ್ಥಿನಿಲಯವು ಪಟ್ಟಣದಿಂದ ಹೊರಗಿರುವುದರಿಂದ ರಾತ್ರಿ ವೇಳೇ ಯಾವುದೇ ವೈದ್ಯಕೀಯ ಸಮಸ್ಯೆ ಎದುರಾದರೂ ಸಾರಿಗೆ ವ್ಯವಸ್ಥೆಯ ಕೊರತೆ ಇದೆ. ಇದನ್ನು ಸರಿಪಡಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದರು. ಡಾ. ನಾಗಲಕ್ಷ್ಮೀ ಚೌಧರಿ ಅವರು ಏನೇ ಸಮಸ್ಯೆ, ಕುಂದುಕೊರತೆಗಳಿದ್ದರೂ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಿದ್ಯಾರ್ಥಿನಿಲಯದ ವ್ಯವಸ್ಥೆಗಳನ್ನು ಸರಿಪಡಿಸಲಾಗುವುದು ಎಂದರು.
ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ವಿದ್ಯಾರ್ಥಿನಿಲಯಕ್ಕೆ ಬೇಕಾಗಿರುವ ಸೌಲಭ್ಯಗಳು, ಆಗಬೇಕಾಗಿರುವ ವ್ಯವಸ್ಥೆಗಳ ಕುರಿತು ಲಿಖಿತವಾಗಿ ಪ್ರಸ್ತಾವನೆ ಸಲ್ಲಿಸಿ. ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.