ಅಹಿಂದ ವರ್ಗಕ್ಕೆ ಮುಖ್ಯಮಂತ್ರಿಯಿಂದಲೇ ಅನ್ಯಾಯ

22rajesh2
Published on

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಹಿಂದ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಅಶ್ವಿನ್‌ಗೌಡ ಆರೋಪಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿ, ಕಳೆದ 15 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ದಿವಾಳಿಯಾಗುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಭ್ರಷ್ಟಾಚಾರದಲ್ಲಿ ತೊಡಗಿದೆ. ಅಹಿಂದ ಹೆಸರಿನಿಂದ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ದಲಿತರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಕೆ ಮಾಡುತ್ತಿದ್ದಾರೆ ಎಂದು ದೂರಿದರು.

ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಸ್ವಪಕ್ಷಿಯ ಶಾಸಕರಿಗೆ ಸರ್ಕಾರದ ಬಗ್ಗೆ ಆತ್ಮಾಭಿಮಾನವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ದಲಿತರು ಹಾಗೂ ಬಡವರ ಪರವಾಗಿ ಈ ಸರ್ಕಾರ ಇಲ್ಲ. ಇದರ ವಿರುದ್ಧ ಸಂಘಟನಾತ್ಮಕವಾಗಿ ನಾವೆಲ್ಲರೂ ಹೋರಾಟ ಮಾಡಿ, ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಸ್ಥಾಪಿಸಲು ಶ್ರಮಿಸೋಣ ಎಂದು ಲಕ್ಷ್ಮೀ ಹೇಳಿದರು.

ವಿದ್ಯಾರ್ಥಿ ವೇತನ ನೀಡುತ್ತಿಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಸಂವಿಧಾನ ಹಾಗೂ ದಲಿತ ವಿರೋಧಿ ಸರ್ಕಾರವಾಗಿದೆ. ನಮ್ಮ ಸರ್ಕಾರ ಇದ್ದಾಗ ಎಸ್ಸಿ, ಎಸ್ಟಿ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ಈಗ ತಮ್ಮ ಅವಧಿಯಲ್ಲಿ ಆ ಸಮುದಾಯದ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿಲ್ಲ ಎಂದರು.
ದಲಿತರ ಬೀದಿಗಳಲ್ಲಿ ‘ಬಿಜೆಪಿಗೆ ಮತ ಹಾಕಬೇಡಿ, ಸಂವಿಧಾನ ಬದಲಿಸುತ್ತಾರೆ’ ಎಂದು ಅಪಪ್ರಚಾರ ಮಾಡಿದರು. ಆದರೂ ಕಾಂಗ್ರೆಸ್ 99ಕ್ಕಿಂತ ಹೆಚ್ಚು ಸೀಟು ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ. ನಿಜವಾದ ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಗಳು ಕಾಂಗ್ರೆಸ್‌ನವರು ಎಂದು ಮಹೇಶ್ ದೂರಿದರು.

ಸರ್ಕಾರ ಪತನಕ್ಕೆ ನಾಂದಿ ಹಾಡೋಣ:
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಸಂಘಟಿಸುವ ಮೂಲಕ ನಾಲ್ಕು ಕ್ಷೇತ್ರವನ್ನು ಗೆಲ್ಲುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯುವ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರ ಪತನಕ್ಕೆ ನಾಂದಿ ಹಾಡೋಣ ಎಂದರು.

ಶಾಸಕ ಎಸ್.ಬಾಲರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ರಾಷ್ಟ್ರೀಯ ಹಿಂದುಳಿದ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಕಾಡಾ ಮಾಜಿ ಅಧ್ಯಕ್ಷ ನಿಜಗುಣ ರಾಜು, ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ, ಡಾ.ಎ.ಆರ್.ಬಾಬು, ಮಾಜಿ ಜಿಲ್ಲಾಧ್ಯಕ್ಷ ಸುಂದರ್, ನಾರಾಯಣ ಪ್ರಸಾದ್, ಜಿಪಂ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ಎಸ್ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಯಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ. ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net