ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

07rajesh17
Published on

ಚಾಮರಾಜನಗರ: ಮುಖ್ಯ ಶಿಕ್ಷಕರು ಹಾಗೂ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡುವುದು ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರಾಥಮಿಕ ಶಾಲಾ ಶಿಕ್ಷಕರು ಭಿತ್ತಿ ಪತ್ರಗಳನ್ನು ಹಿಡಿದು, ವಿವಿಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಾಗಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಮಾತನಾಡಿ, ಕಳೆದ 6-7 ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ನಿರತ ಪದವೀಧರ ಶಿಕ್ಷಕರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಈ ಬಗ್ಗೆ ಎಷ್ಟೇಬಾರಿ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸದೇ ಇರುವುದರಿಂದ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಶಿಕ್ಷಕರು ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಂತೆ ಆ.12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

2017ರ ಹೊಸವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಪ್ರಾಥಮಿಕ ಶಾಲಾ ಶಿಕ್ಷಕರ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪದವಿ ಪೂರೈಸಿದ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮೀಕರಿಸಬೇಕು. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿನೀಡಬೇಕು. 2016 ರ ಪೂರ್ವದಂತೆ ಮುಖ್ಯ ಶಿಕ್ಷಕರು ಹಾಗೂ ಹಿರಿಯ ಮುಖ್ಯಶಿಕ್ಷಕರ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಮಾದಪ್ಪ, ಪದಾಧಿಕಾರಿಗಳಾದ ಬುಖಾನಿ ಸಲೀನಾ, ಮಂಜುಳಾ, ಗೀತಾ, ಮಹದೇವಸ್ವಾಮಿ, ಮಹೇಶ್, ದಿನೇಶ್, ರಾಚಯ್ಯ, ತಾಲೂಕು ಅಧ್ಯಕ್ಷರಾದ ಸಿ.ಕೆ.ರಾಮಸ್ವಾಮಿ, ಶಿವಪ್ರಸಾದ್, ಸೋಮಣ್ಣ, ಶ್ರೀಧರ್, ಕೃಷ್ಣೇಗೌಡ, ನಂಜುಂಡಸ್ವಾಮಿ, ಸುಶೀಲಾ, ಶಶಿಕಲಾ, ಸುಧಾ, ಮಹಾದೇವಸ್ವಾಮಿ, ಎಸ್.ನಟರಾಜ್, ಸಿ.ಮಲ್ಲಿಕಾರ್ಜುನ್, ಕೃಷ್ಣಮೂರ್ತಿ, ಸಿದ್ದಲಿಂಗಮೂರ್ತಿ, ಕೆ.ಎಂ.ಮಹೇಶ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net