ಆ.10ರ ಮೈಸೂರು ಚಲೋದಲ್ಲಿ ಭಾಗಿಯಾಗಿ

Published on

ಚಾಮರಾಜನಗರ: ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣಗಳ ವಿರುದ್ಧ ಆ.10ರಂದು ಮೈಸೂರು ಚಲೋದಲ್ಲಿ ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಎಂದು ಗುಂಡ್ಲುಪೇಟೆ ಮಾಜಿ ಶಾಸಕ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಕರೆ ನೀಡಿದರು.

ಮೈಸೂರು ಚಲೋ ಪಾದಯಾತ್ರೆ 6 ದಿನಗಳಿಂದ ನಡೆಯುತ್ತಿದೆ. ಆ.10ರಂದು ಮೈಸೂರು ಚಲೋ ನಡೆಯಲಿದ್ದು, 15 ಸಾವಿರ ಜನರು ಜಿಲ್ಲೆಯಿಂದ ಭಾಗವಹಿಸುವರು. 15 ತಿಂಗಳು ಪೂರೈಸಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಮಾಡಿದೆ. ಹಗರಣ, ಭ್ರಷ್ಟಾಚಾರದಲ್ಲಿ ತೊಡಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಡವರಿಗೆ ಸೇರಿದ ಹಣವನ್ನು ಲೂಟಿ ಮಾಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಸಿಲುಕೊಂಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಾಜಿ ಶಾಸಕ ಎಸ್.ಬಾಲರಾಜ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ ಜಮೀನು ತೆಗೆದುಕೊಂಡಿದ್ದಾರೆ. ಎಸ್‌ಇಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ದಲಿತ ಸಮಾಜದವರಾಗಿದ್ದು, ದಲಿತರ ಹಣ ಬಳಕೆ ಮಾಡುತ್ತಿದ್ದಾರೆ. ಮೋಸ ಮಾಡಲು ಒಂದು ಮಿತಿ ಇದೆ. ದಲಿತರ ಪರ ಕಾಂಗ್ರೆಸ್ ಸರ್ಕಾರವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣಗಳ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ. ಕಾಂಗ್ರೆಸ್ ಹಮ್ಮಿಕೊಂಡಿರುವ ಜನಾಂದೋಲದಲ್ಲಿ ಅಹಿಂದ ಸಮಾಜ ಹೋಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಬೇಂದ್ರಪ್ಪ, ಹೊಂಗನೂರು ಮಹದೇವಸ್ವಾಮಿ, ಮೂಡ್ನಾಕೂಡು ಪ್ರಕಾಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net