ಚಾಮರಾಜನಗರ: ಬುಡಕಟ್ಟು ಗಿರಿಜನರಿಗೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಎಂ.ಆರ್.ಮಂಜುನಾಥ್ ಭರವಸೆ ನೀಡಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ 30ನೇ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರಣ್ಯ ಪ್ರದೇಶದಲ್ಲಿ ತಲಾ ತಲಾಂತರಗಳಿಂದ ವಾಸಿಸುತ್ತಾ ಬಂದಿರುವ ಗಿರಿಜನರಿಗೆ ಮೂಲ ಸೌಕರ್ಯ ಇಲ್ಲದೆ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ತಾವು ಸದನದಲ್ಲಿ ಸರ್ಕಾರದ ಗಮನ ಸೆಳೆದಿದ್ದು ಗಿರಿಜನರು ವಾಸಿಸುವ ಹಾಡಿಗಳಿಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಮೂಲ ಸೌಲಭ್ಯ ಕಲ್ಪಿಸಲು ಇರುವ ಅಡೆತಡೆಗಳನ್ನು ದೂರ ಮಾಡಲಾಗುತ್ತಿದೆ ಎಂದು ತಿಳಿಸಿದರು. ಹನೂರು ತಾಲೂಕಿನಲ್ಲಿ 80 ಗಿರಿಜನ ಹಾಡಿಗಳಿದ್ದು 11 ಹಾಡಿಗಳಿಗೆ ಮೂಲ ಸೌಲಭ್ಯ ಇರುವುದಿಲ್ಲ, ಇಲ್ಲಿನ ಜನರಿಗೆ ಅನುಕೂಲ ಕಲ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊನಾ ರೋತ್ ಮಾತನಾಡಿ, ಗಿರಿಜನ ಮಕ್ಕಳಲ್ಲಿ ಹಿಮೋಗ್ಲೊಬಿನ್ ಕಡಿಮೆ ಇದ್ದು ಅವರ ಆರೋಗ್ಯ ಸುಧಾರಣೆಗೆ ಕ್ರಮ ವಹಿಸಲಾಗುತ್ತಿದೆ, ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಮಂಜುಳಾ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈ ಜೊಡಿಸಬೇಕೆಂದು ತಿಳಿಸಿದರು.
ಅರಣ್ಯ ಹಕ್ಕು ಸಮಿತಿ ಸದಸ್ಯ ಡಾ.ಸಿ.ಮಾದೇಗೌಡ ಮಾತನಾಡಿ, ಆದಿವಾಸಿಗಳ ಹಕ್ಕುಗಳಿಗಾಗಿ ಬಿರ್ಸಾಮುಂಡಾ ಅವರು ಬ್ರಿಟಿಷರ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದಿದ್ದಾರೆ. ಕಾಡಿನಲ್ಲಿ ವಾಸಿಸುವ ಆದಿವಾಸಿಗಳು ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಕಾಡು ಹಾಗೂ ಪ್ರಾಣಿಗಳಿಗೆ ಹೊಂದಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ನಮ್ಮ ಜನರಿಗೆ ಮೂಲ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಕ್ರಮ ವಹಿಸಬೇಕೆಂದು ತಿಳಿಸಿದ ಅವರು ಗಿರಿಜನರು ತಾವು ಬೆಳೆಸಿಕೊಂಡು ಬಂದಿರುವ ಕಲೆ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ, ಗಿರಿಜನ ಅಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಂಗೇಗೌಡ, ಸಮಾಜ ಸೇವಕ ನಿಶಾಂತ್, ಡಾ.ಸಿದ್ದಪ್ಪಶೆಟ್ಟಿ, ಮಾಧು, ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಡಾ.ಎಂ.ಜಡೇಗೌಡ, ವಿ.ಮುತ್ತಯ್ಯ, ಕೋಣೂರೇಗೌಡ, ಲ್ಯಾಂಪ್ಸ್ ಉಪಾಧ್ಯಕ್ಷ ಶಿವಣ್ಣ ಇತರರು ಇದ್ದರು.