ಸದೃಢ ಸಮಾಜ ನಿರ್ಮಾಣಕ್ಕೆ ಯುವಕರೇ ಬುನಾದಿ

Published on

ಚಾಮರಾಜನಗರ : ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಯುವಕರೇ ಬುನಾದಿಯಾಗಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಈಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ಪ್ರತಿ ಬಂಧಕ ನಿಯಂತ್ರಣಾ ಘಟಕ, ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜೆಎಸ್‌ಎಸ್ ಮಹಿಳಾ ಕಾಲೇಜು ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್‌ಐವಿ, ಏಡ್ಸ್ ಅರಿವಿನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವ ಜನಾಂಗ ದೇಶದ ಬೆನ್ನೆಲುಬು ಇದ್ದಂತೆ, 15-20 ವರ್ಷಗಳ ಯುವಕರು ಪ್ರೌಢಾವಸ್ಥೆಯಲ್ಲೇ ಉತ್ತಮ ಶಿಕ್ಷಣ-ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಈ ಮೂಲಕ ತಮ್ಮ ಗುರಿ ಸಾಧನೆ ಮಾಡಬೇಕು. ಉತ್ತಮ ಆರೋಗ್ಯವಿದ್ದರೇ ಮಾತ್ರ ಉತ್ತಮವಾದ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಯುವ ಜನಾಂಗ ತಮ್ಮ ಗುರಿ ಸಾಧನೆಯನ್ನು ಮುಟ್ಟುವ ತನಕ ಛಲದಿಂದ ಸಾಗಬೇಕು. ವಿದ್ಯಾಭ್ಯಾಸದ ಅವಧಿಯಲ್ಲಿ ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗಬಾರದು. ಜತೆಗೆ ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಅಸುರಕ್ಷಿತ ಲೈಂಗಿಕತೆಯಿಂದ ಎಚ್‌ಐವಿ ವೈರಸ್ ಹರಡುತ್ತದೆ. ಈ ಕುರಿತು ಯುವ ಜನಾಂಗ ಜಾಗೃತರಾಗಬೇಕು. ಸಮಾಜದಲ್ಲಿ ಎಚ್‌ಐವಿ ಮತ್ತು ಟಿಬಿ ಕಾಯಿಲೆ ಇರುವವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಬೇಕು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎಸ್.ರವಿಕುಮಾರ್ ಮಾತನಾಡಿ, ಪ್ರಪಂಚದಾದ್ಯಂತ ಯುವ ಜನಾಂಗವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಯುವ ದಿನ ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಒಂದು ಘೋಷ ವಾಕ್ಯವನ್ನು ನೀಡಲಾಗುತ್ತಿದೆ. ಅದರಂತೆ ಈ ಬಾರಿ ಸುಸ್ಥಿರ ಅಭಿವೃದ್ಧಿಗಾಗಿ ಯುವ ಡಿಜಿಟಲ್ ಮಾರ್ಗಗಳು ಘೋಷವಾಕ್ಯದ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಯುವಕರು ಮನಸ್ಸು ಮಾಡಿದರೆ ದೇಶದಲ್ಲಿ ಆಮೂಲಾಗ್ರ ಬದಲಾವಣೆ ಸಾಧ್ಯವಾಗುತ್ತದೆ. ನಮ್ಮ ದೇಶ ಡಿಜಿಟಲ್ ವಿಭಾಗದಲ್ಲಿ ತುಂಬಾ ಮುಂದುವರಿದಿದೆ. ಅದನ್ನು ಸೂಕ್ತ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ಮುಂದುವರಿಯಬೇಕಾಗಿದೆ. ಈ ಮೂಲಕ ದೇಶದ ಅಭಿವೃದ್ಧಿಯಲ್ಲಿ ಯುವಕರು ಭಾಗಿಯಾಗಬೇಕಿದೆ. ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಜೆಎಸ್‌ಎಸ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್, ಸಹಾಯಕ ಪ್ರಾಧ್ಯಾಪಕ ಮಹೇಶ್, ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಸತೀಶ್, ದೊರೆಸ್ವಾಮಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net