

ಚಾಮರಾಜನಗರ: ಪ್ರತಿಯೊಬ್ಬರು ದೇವಾಯಗಳಿಗೆ ಭೇಟಿ ನೀಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತಿದೆ. ಈ ಮೂಲಕ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹೇಳಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಆವರಣದಲ್ಲಿ ಶ್ರೀವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಹಾಗೂ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಹಯೋಗದಲ್ಲಿ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಸುಖ-ಶಾಂತಿ ನೆಮ್ಮದಿ ದೊರೆಯಬೇಕಾದರೇ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವ ಅಭಿರುಚಿ ಬೆಳೆಸಿಕೊಳ್ಳಬೇಕು. ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅದನ್ನು ಸದುಪಯೋಗಿಸಿಕೊಂಡು, ತಮ್ಮ ಮಕ್ಕಳನ್ನು ಮುಖ್ಯ ವಾಹಿನಿಗೆ ತರಬೇಕು ಎಂದು ತಿಳಿಸಿದರು. ತಹಸೀಲ್ದಾರ್ ಗಿರಿಜಾ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ,ಹಿಳೆಯರಿಗೆ ತನ್ನದೇ ಆದ ಮಹತ್ವವಿದೆ. ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಸೀರೆ, ಕುಂಕುಮ ಹಾಗೂ ಇನ್ನಿತರೆ ವಸ್ತುಗಳನ್ನು ನೀಡುತ್ತಿರುವುದು ನಮ್ಮ ಸಂಸ್ಕೃತಿ, ಪರಂಪರೆಯನ್ನು ಗೌರವಿಸಿದಂತಾಗುತ್ತದೆ ಎಂದರು.
ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು ಮಾತನಾಡಿ, ಸಂಸ್ಥೆಯ ವತಿಯಿಂದ ಹಲವಾರು ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಈ ಮೂಲಕ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಹಲವಾರು ಮಹಿಳೆಯರಿಗೆ ಉಚಿತವಾಗಿ ಸೀರೆ, ಬ್ಲೌಸ್‌ಪೀಸ್, ಅರಿಶಿನ ಕುಂಕುಮ, ಹೂವು, ಬಳೆ, ಬಾಳೆಹಣ್ಣು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಮಹೇಶ್, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಾರದ್ವಾಜ್, ಇನ್ನರ್ ವ್ಹೀಲ್ ಸಂಸ್ಥೆ ಮಾಜಿ ಅಧ್ಯಕ್ಷ ಲಕ್ಷ್ಮೀ, ಕಿರುತೆರೆ ನಟಿ ರಚನಾ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಿ.ಮಾದಲಾಂಬಿಕೆ, ಸದಸ್ಯರಾದ ಮಾಳವಿಕಾ, ನಿಹಾರಿಕಾ, ರಕ್ಷಿತಾ, ಅಮೂಲ್ಯ, ಕಾವ್ಯ, ಮಹೇಶ್, ಕುಮಾರ್ ಹಾಗೂ ಇತರರು ಭಾಗವಹಿಸಿದ್ದರು.