ಭಯಮುಕ್ತ ವಾತಾವರಣ ನಿರ್ಮಿಸಿ

17rajesh5
Published on

ಚಾಮರಾಜನಗರ: ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಭಯಮುಕ್ತ ವಾತಾವರಣವನ್ನು ನಿರ್ಮಿಸಿ ಎಂದು ಸಿಮ್ಸ್ ಆಸ್ಪತ್ರೆಯ ಕಿರಿಯ ವೈದ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ನಂದಕಿಶೋರ್ ಒತ್ತಾಯಿಸಿದರು.

ಜಿಲ್ಲಾಸ್ಪತ್ರೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೊಲ್ಕತ್ತಾದ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗಮಾಡುತ್ತಿದ್ದ ಕಿರಿಯ ವೈದ್ಯಯ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಅತ್ಯಂತ ಖಂಡನೀಯವಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಿದ ನಂತರ 1 ಸಾವಿರಕ್ಕಿಂತಲೂ ಹೆಚ್ಚು ಜನರ ಗುಂಪು ಕಾಲೇಜಿಗೆ ನುಗ್ಗಿ ಸಾಕ್ಷ್ಯ ನಾಶಪಡಿಸಲು ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಕೂಡಲೇ ನ್ಯಾಯಾಂಗ ಮಧ್ಯೆ ಪ್ರವೇಶಿಸಿ ಹತ್ಯೆಯಾದ ಹೆಣ್ಣು ಮಗಳಿಗೆ ನ್ಯಾಯಕೊಡಿಸಬೇಕು. ಅತ್ಯಾಚಾರ ಮತ್ತು ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ವೈದ್ಯೋ ನಾರಾಯಣ ಹರಿ ಎನ್ನುವ ನೆಲದಲ್ಲಿ ವೈದ್ಯರನ್ನು ಹತ್ಯೆ ಮಾಡುತ್ತಿರುವುದು, ಅವರ ಮೇಲೆ ನಿರಂತರವಾಗಿ ಹಲ್ಲೆ ಮಾಡುವುದನ್ನು ನೋಡಿದರೇ ವೈದ್ಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ದೇಶದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ರಾಜ್ಯದಲ್ಲಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ಹಾಗೂ ಭಯಮುಕ್ತ ವಾತಾವರಣವನ್ನು ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net