ಚಾಮರಾಜನಗರ: ನಾಡಿನ ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ವಾಪಸ್ ಪಡೆಯದಿದ್ದರೆ ಶ್ರಮಿಕ ವರ್ಗಗಳ ಒಕ್ಕೂಟದ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಿ ರಾಜಭವನಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಪು.ಶ್ರೀನಿವಾಸನಾಯಕ ಎಚ್ಚರಿಕೆ ನೀಡಿದ್ದಾರೆ.
ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಪೂರ್ವಾನುಮತಿ ನೀಡಿರುವುದು ಖಂಡನೀಯವಾಗಿದೆ. ಕೂಡಲೇ ರಾಜ್ಯಪಾಲರು ಅನುಮತಿ ವಾಪಸ್ ಪಡೆಯಬೇಕು ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಹೇಳಿದರು.
ಸಿದ್ದರಾಮಯ್ಯ ಅವರು ಶ್ರಮಿಕ ವರ್ಗಗಳ ಪರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವುದನ್ನು ಸಹಿಸದೇ ಬಿಜೆಪಿ, ಜೆಡಿಎಸ್ ಮಿತ್ರ ಪಕ್ಷಗಳು ರಾಜಕೀಯ ಅಸ್ತಿರತೆಯನ್ನು ನಿರ್ಮಿಸಿ ಶ್ರಮಿಕ ವರ್ಗಗಳಿಗೆ ಸಿಗುವ ಸೌಲಭ್ಯಗಳನ್ನು ತಡೆಯುವ ಸಲುವಾಗಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಈ ಮೂಲಕ ಅಧಿಕಾರದಿಂದ ಕೆಳಗಿಳಿಸಿ ರಾಜ್ಯದಲ್ಲಿ ಮನುವಾದಿ ಸರ್ಕಾರ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.