ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಬಹುಮುಖ್ಯ

20rajesh3
Published on

ಚಾಮರಾಜನಗರ: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಹೆಚ್ಚಾಗಿ ಅರಿತುಕೊಳ್ಳಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಸಲಹೆ ನೀಡಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜನಹಿತಾಶಕ್ತಿ ಹೋರಾಟ ವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿರುವ ಹಲವು ಧರ್ಮಗಳಿಗೆ ಅದರದ್ದೇ ಆದ ಧರ್ಮ ಗ್ರಂಥಗಳು ಇದೆ. ಆದರೇ ಭಾರತೀಯರು ಎಂದು ಗುರುತಿಸಿಕೊಳ್ಳಲು ಸಂವಿಧಾನವೇ ಪವಿತ್ರ ಗ್ರಂಥವಾಗಿದೆ. ಪ್ರತಿಯೊಬ್ಬ ಭಾರತೀಯರು ಸಂವಿಧಾನವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕಿದೆ. ನಮ್ಮ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ವ್ಯವಸ್ಥೆ ಹೇಗೆ ಕರ್ತವ್ಯ ನಿರ್ವಹಿಸುತ್ತದೆ ಎನ್ನುವುದನ್ನು ಅರಿತುಕೊಳ್ಳಲು ಸಂವಿಧಾನದ ಜ್ಞಾನ ಅಗತ್ಯವಾಗಿದೆ ಎಂದು ಹೇಳಿದರು.

ನಮ್ಮ ದೇಶ ಭೂ ಪ್ರದೇಶ, ಜನ, ಸಂಸ್ಕೃತಿಯಲ್ಲಿ ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ಈ ನಡುವೆಯೂ ನಾವೆಲ್ಲರೂ ಒಂದೇ ಎಂಬುದಕ್ಕೆ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದರ ಆಶಯಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಸೋಮಶೇಖರ್ ಬಿಸಲವಾಡಿ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ರಚನೆಯ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿದೆ. ಕುರಾನ್, ಬೈಬಲ್, ಭಗವದ್ಗೀತೆ ಹಾಗೂ ಇನ್ನಿತರೆ ಧರ್ಮ ಗ್ರಂಥಗಳಿಗಿಂತಲೂ ಸಂವಿಧಾನ ಪವಿತ್ರ ಗ್ರಂಥವಾಗಿದೆ. ದೇಶದ ಪ್ರತಿಯೊಬ್ಬ ನಾಗರೀಕರು ಸಂವಿಧಾನದ ನೆರಳಿನಲ್ಲೇ ಇದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಪ್ರಸನ್ನ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎಚ್.ಪಿ.ನಿರ್ಮಲಾ, ಜನಹಿತಾಶಕ್ತಿ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್, ಪ್ರಧಾನ ಕಾರ್ಯದರ್ಶಿ ಕಾಡಹಳ್ಳಿ ನಾಗರಾಜ್, ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಂಗಸ್ವಾಮಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net