ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

press meet
Published on

ಚಾಮರಾಜನಗರ: ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಮುಖ್ಯಮಂತ್ರಿಗಳ ಮೇಲೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ಕೂಡಲೇ ಮುಖ್ಯಮಂತ್ರಿ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಅದನ್ನು ಬಿಟ್ಟು ನಾನು ಭ್ರಷ್ಟಾಚಾರ ಮಾಡಿಲ್ಲ, ನಾನೊಬ್ಬ ಸಮಾಜವಾದಿ, ನಿಷ್ಕಳಂಕ ರಾಜಕಾರಣಿ ಎಂದು ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳವುದು ಸರಿಯಲ್ಲ. ನಿಮ್ಮ ಮೇಲಿನ ಆರೋಪ ಸತ್ಯವೋ, ಸುಳ್ಳೋ ಎಂದು ತನಿಖೆ ಆಗುವವರೆಗೆ ನೀವು ಆರೋಪಿ ಸ್ಥಾನದಲ್ಲಿರುತ್ತೀರಿ. ಆಗಾಗಿ ಆರೋಪ ಮುಕ್ತರಾಗುವವರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವುದೇ ಆದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಒಬ್ಬ ಎಸ್‌ಸಿ, ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಬೇಕು. ಅವರೇ ಪ್ರತಿಪಾದನೆ ಮಾಡುವ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವುದಕ್ಕೆ ದಲಿತ ಮುಖ್ಯಮಂತ್ರಿ ನೇಮಕ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.

ಸಿಎಂ ಸಿದ್ದರಾಮಯ್ಯ ಮೇಲೆ ತನಿಖೆಗೆ ಆದೇಶ ನೀಡಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಿ ಲೋಕಾಯುಕ್ತರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರನ್ನು ಕೇಳಿದ್ದಾರೆ. ಆಗಾಗಿ ರಾಜ್ಯಪಾಲರು ಕುಮಾರಸ್ವಾಮಿ ಅವರ ಮೇಲೆ ಕೂಡಲೇ ಪ್ರಾಸಿಕೂಷನ್‌ಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಸಂಯೋಜಕ ರಾಜಶೇಖರ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಚಂದ್ರಕಾಂತ್, ಭೈರಲಿಂಗಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net