ಚಾಮರಾಜನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿ ಬದುಕು, ಸ್ವಾತಂತ್ರೃ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸುತ್ತಿದ್ದು, ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ., ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ., ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು. ಪ್ರತಿ ವಿಭಾಗದಲ್ಲಿನ ಅತ್ಯುತ್ತಮ 3 ಪ್ರಬಂಧಗಳಿಗೆ ಅಕ್ಟೋಬರ್ 2 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.