

ಚಾಮರಾಜನಗರ : ಪೌತಿ ಖಾತೆ ವಿಚಾರವಾಗಿ ಗ್ರಾಮ ಲೆಕ್ಕಾಧಿಕಾರಿಯನ್ನು ನಿಂದಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ್ದವನಿಗೆ ಗುಂಡ್ಲುಪೇಟೆ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಗುಂಡ್ಲುಪೇಟೆ ತಾಲೂಕಿನ ವಡೆಯನಪುರ ಗ್ರಾಮದ ಆರೋಪಿ ಶ್ರೀಕಂಠಸ್ವಾಮಿ, ಶಿವಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಬಸವರಾಜು ಅವರೊಂದಿಗೆ ಪೌತಿ ಖಾತೆಯ ವಿಚಾರವಾಗಿ ಜಗಳ ಮಾಡಿದ್ದರು. ಅವಾಚ್ಯವಾಗಿ ನಿಂದಿಸಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದರು. ಈ ಬಗ್ಗೆ ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ವೆಂಕಟೇಶ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ನ್ಯಾಯಾಧೀಶ ಜೆ.ಶಿವಕುಮಾರ, ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಹಮ್ಮದ್ ವಸೀಂ ಉಲ್ಲಾ ವಾದ ಮಂಡಿಸಿದ್ದರು.