ವಚನಗಳ ಮೂಲಕ ಸಮಾಜತಿದ್ದುವ ಕಾರ್ಯ

27rajesh7
Published on

ಚಾಮರಾಜನಗರ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸವಿತಾ ಸಮಾಜ ಶೈಕ್ಷಣಿಕವಾಗಿ ಮುನ್ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.

ನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಶರಣ ಶ್ರೀಹಡಪದ ಅಪ್ಪಣ್ಣ ಅವರ 890ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣನವರು ಅನುಭವ ಮಂಟಪದ ಉಸ್ತುವಾರಿ ವಹಿಸಿಕೊಂಡಿದ್ದರು. ತೀರಾ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಮುದಾಯದ ಅಪ್ಪಣ್ಣನವರನ್ನು ಅನುಭವ ಮಂಟಪದ ದ್ವಾರದಲ್ಲಿ ನಿಲ್ಲಿಸಲಾಗಿತ್ತು. ಶಿವಶರಣರು ಸೇರಿದಂತೆ ಯಾವುದೇ ವ್ಯಕ್ತಿ ಮಂಟಪ ಪ್ರವೇಶಿಸುವ ಮೊದಲು ಹಡಪದ ಅಪ್ಪಣ್ಣನ ದರ್ಶನ ಮಾಡಿಯೇ ಒಳಬರಬೇಕಾಗಿತ್ತು. ಅಷ್ಟು ಮೌಲ್ಯಯುತ ಸ್ಥಾನ ಪಡೆದಿದ್ದ ಅಪ್ಪಣ್ಣನವರು ವಚನಗಳ ಮೂಲಕ ಸಮಾಜ ತಿದ್ದುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು ಎಂದರು.

ಪ್ರಸ್ತುತ ಸವಿತಾ ಸಮಾಜದ ಅಭಿವೃದ್ಧಿಗಾಗಿ ಸರ್ಕಾರವು ನಿಗಮಗಳ ಮೂಲಕ ಸ್ವಯಂ ಉದ್ಯೋಗ ನೇರ ಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮುದಾಯ ಸಾಮಾಜಿಕ ಮುನ್ನೆಲೆಗೆ ಬರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಯಳಂದೂರಿನ ಎಸ್.ಡಿ.ವಿ.ಎಸ್ ವಿದ್ಯಾಸಂಸ್ಥೆಯ ಶಿಕ್ಷಕ ಗುಂಬಳ್ಳಿ ಬಸವರಾಜ್ ಮಾತನಾಡಿ, ಹಡಪದ ಅಪ್ಪಣ್ಣನವರ ವೈಚಾರಿಕ ಪ್ರಜ್ಞೆ, ಸಮಯಪ್ರಜ್ಞೆ, ನಡವಳಿಕೆ ಉತ್ತಮವಾಗಿತ್ತು. ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಬಂಧುವಾಗಿದ್ದ ಹಡಪದ ಅಪ್ಪಣ್ಣನವರು 251 ವಚನಗಳನ್ನು ರಚಿಸಿದ್ದರು. ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಟೊಂಕಕಟ್ಟಿದ್ದ ಅಪ್ಪಣ್ಣನವರನ್ನು ಅಲ್ಲಮಪ್ರಭುಗಳು ನಿಜಸುಖಿ ಎಂದು ಕರೆದಿದ್ದರು ಎಂದರು.

ಕಾರ್ಯಕ್ರಮದಲ್ಲಿ ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಶಾಸಕ ಎ.ಆರ್. ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್‌ಕುಮಾರ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವೆಂಕಟರಾಜು ಹಾಗೂ ಇತರರು ಉಪಸ್ಥಿತರಿದ್ದರು.

  • ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಪ್ರವಾಸಿಮಂದಿರದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಆಯೋಜಿಸಲಾಗಿದ್ದ ಹಡಪದ ಅಪ್ಪಣ್ಣ ಅವರ ಭಾವಚಿತ್ರ ಮೆರವಣಿಗೆಗೆ ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಪ್ರವಾಸಿ ಮಂದಿರದಿಂದ ಸಾಗಿದ ಮೆರವಣಿಗೆ ಸುಲ್ತಾನ್ ಷರ್ೀ ವೃತ್ತ, ಗುಂಡ್ಲುಪೇಟೆ ವೃತ್ತ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾ ರಂಗಮಂದಿರಕ್ಕೆ ತಲುಪಿತು. ಡೊಳ್ಳು ಕುಣಿತ, ಗೊರವರ ಕುಣಿತ, ವೀರಗಾಸೆ ನೃತ್ಯ ಹಾಗೂ ಇನ್ನಿತರೆ ಕಲಾತಂಡಗಳು ಮೆರವಣಿಗೆಗೆ ಮೆರಗು ತುಂಬಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net