ಸಾಮಾಜಿಕ ಪಿಡುಗಗಳ ತಡೆಗೆ ಜಾಗೃತಿ ಅಗತ್ಯ

29rajesh10
Published on

ಚಾಮರಾಜನಗರ: ಸಾಮಾಜಿಕ ಪಿಡುಗುಗಳಾದ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಹಾಗೂ ಬಹಿಷ್ಕಾರ ತಡೆಗಾಗಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ತಿಳಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ ಹಾಗೂ ಸಾಮಾಜಿಕ ಬಹಿಷ್ಕಾರ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಹಾಗೂ ಬಹಿಷ್ಕಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಪರಿಣಾಮಕಾರಿ (ರೂಟ್ ಪ್ಲಾನ್) ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ನ್ಯಾಯಾಲಯದಲ್ಲಿ ಸಾಮಾಜಿಕ ಬಹಿಷ್ಕಾರದ 63 ದೂರುಗಳು ದಾಖಲಾಗಿವೆ. ಅದರಲ್ಲೂ ಸ್ವಜಾತಿ ಬಹಿಷ್ಕಾರ ಖಂಡನೀಯವಾಗಿದೆ. ಇದರಿಂದ ಜನರಿಗೆ ರಕ್ಷಣೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಏರ್ಪಡಿಸಿ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕಾದ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾತನಾಡಿ, ಈ ಕಾರ್ಯಾಗಾರ ಅತ್ಯಂತ ಮಹತ್ವಪೂರ್ಣವಾಗಿದೆ. ಮಹಿಳೆಯರ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಈ ಬಗ್ಗೆ ಸಾಕಷ್ಟು ಕಾಳಜಿ ವಹಿಸಬೇಕು. ರಾಜ್ಯದ ಇತರ ಜಿಲ್ಲೆಗಳು ಆರ್ಥಿಕವಾಗಿ ಹಿಂದುಳಿದಿರಬಹುದು. ಆದರೆ ನಮ್ಮ ಜಿಲ್ಲೆಯಲ್ಲಿರುವಷ್ಟು ಸಾಮಾಜಿಕ ಸಮಸ್ಯೆಗಳಿಲ್ಲ. ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಹಾಗೂ ಬಹಿಷ್ಕಾರ ಪ್ರಕರಣಗಳನ್ನು ಬೇರುಸಮೇತ ಕೀಳಲು ಆಶಾ, ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತರು ತಳಮಟ್ಟದಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ ಮಾತನಾಡಿ, ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಎಲ್ಲರೂ ಮುಂದಾಗಬೇಕು. ಬೇಗ ಮದುವೆ ಮಾಡಿದರೆ ಸಾಕು ಎಂಬ ಮನೋಭಾವ ಪಾಲಕರಲ್ಲಿ ಇರಬಾರದು. ಮೊದಲು ನಮ್ಮನ್ನು ನಾವು ತಿದ್ದಿಕೊಂಡು ಬಳಿಕ ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆಯಾಗಿದೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ನೈತಿಕತೆ ಹಾಗೂ ಸಂಸ್ಕಾರ ಕಲಿಸಿದರೆ ಸುಸಂಸ್ಕೃತರಾಗುವುದರಲ್ಲಿ ಸಂದೇಹವೇ ಇಲ್ಲ. ಸರ್ಕಾರವು ಜನರಿಗೆ ಅದರಲ್ಲೂ ಮಹಿಳೆಯರಿಗೆ ಪ್ರಬಲ ದೃಶ್ಯಮಾಧ್ಯಮಗಳ ಮೂಲಕ ಕಾನೂನುಗಳ ಮಾಹಿತಿ ತಲುಪಿಸಬೇಕು ಎಂದರು.
ಜಿಲ್ಲಾ ಬಾಲಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್ ಹಾಗೂ ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯ ಟಿ.ಜೆ. ಸುರೇಶ್ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ ಹಾಗೂ ಸಾಮಾಜಿಕ ಬಹಿಷ್ಕಾರ ತಡೆ ವಿಚಾರಗಳ ಬಗ್ಗೆ ಕಾರ್ಯಕ್ರಮದಲ್ಲಿ ಸವಿವರವಾಗಿ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಚಿದಂಬರ, ಸಮಾಜ ಕಲ್ಯಾಣ ಉಪನಿರ್ದೇಶಕ ಮುನಿರಾಜು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಘಶ್ರೀ, ಸಿದ್ದಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net