ಗಣಪತಿ ಕೂರಿಸಲು ಅನುಮತಿ ಕಡ್ಡಾಯ

Published on

ಹನೂರು: ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಏಕಗವಾಕ್ಷಿ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಂಡು ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗೌರಿ- ಗಣೇಶ ಹಬ್ಬ ಆಚರಣೆ ಸಂಬಂಧ ಶನಿವಾರ ಆಯೋಜಿಸಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಅನ್ವಯ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಗೌರಿ- ಗಣೇಶ ಹಬ್ಬದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಬಂಧ ಗಣೇಶೋತ್ಸವ ಆಯೋಜಕರಿಗೆ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಸಮಿತಿಯನ್ನು ಜಾರಿಗೊಳಿಸಲಾಗಿದೆ. ಆದ್ದರಿಂದ ಸರ್ಕಾರದ ಆದೇಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಾಗಾಗಿ, ಆಯೋಜಕರು ಪೊಲೀಸ್, ಕಂದಾಯ, ಸೆಸ್ಕ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದುಕೊಂಡು ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು. ಜತೆಗೆ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿರುವ ಮಾರ್ಗದಲ್ಲಿ ಮೂರ್ತಿ ಸ್ಥಾಪನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವೀಂದ್ರ, ಪಪಂ ಮುಖ್ಯಾಧಿಕಾರಿ ಅಶೋಕ್, ಸೆಸ್ಕ್ ಜೆಇ ರಂಗಸ್ವಾಮಿ, ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್‌ನಾಯಕ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್ ಪ್ರಸಾದ್, ರವಿ, ಪ್ರಭಾರ ಆರ್‌ಐ ಶೇಷಣ್ಣ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net