ಚಾಮರಾಜನಗರ: ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಪ್ರಯುಕ್ತ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಕೆರೆ, ಕಾಲುವೆ, ಬಾವಿಗಳಲ್ಲಿ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ಪೂಜಿಸಿ, ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಮೂಲಗಳಿಗೆ ವಿಸರ್ಜಿಸುವುದರಿಂದ ಜಲಮಾಲಿನ್ಯ ಉಂಟಾಗುತ್ತದೆ. ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಯಾವುದೇ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಕೆರೆ, ಕಾಲುವೆ, ಬಾವಿಗಳಲ್ಲಿ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸಬಾರದು.
ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರ ಲೈಸೆನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ತಕ್ಷಣ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್.ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳದಲ್ಲಿ ಮಾತ್ರ ವಿಸರ್ಜಿಸಬೇಕು.
ನೈಸರ್ಗಿಕ, ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳ ಪಕ್ಕದಲ್ಲಿ ಹಸಿಕಸ ಹೂ, ಹಣ್ಣು, ಬಾಳೆ ಕಂಬ, ಮಾವಿನತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಪುರಸಭೆ ಮತ್ತು ಪೋಲಿಸ್ ಇಲಾಖೆಯಿಂದ ನಿಬಂಧನೆಗೊಳ್ಳಪಟ್ಟ ಅನುಮತಿಯನ್ನು ಪಡೆದು ನಂತರವೇ ಪ್ರತಿಷ್ಠಾಪಿಸಬೇಕು. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಯನ್ನು ಪುರಸಭೆ ವತಿಯಿಂದ ನಿಗದಿಪಡಿಸಿರುವ ಕೋಡಹಳ್ಳಿ ರಸ್ತೆ ಬಳಿ ಇರುವ ಹಳೇ ಪಂಪ್‌ಹೌಸ್ ನಲ್ಲಿ ಸ್ಥಾಪಿಸಿರುವ ನೀರಿನ ತೊಟ್ಟಿಯಲ್ಲಿ ವಿಲೇವಾರಿ ಮಾಡಬೇಕು. ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಲಂ 45-ಎ ಅನ್ವಯ 10 ಸಾವಿರ ರೂ.ವರೆಗೆ ದಂಡ ಮತ್ತು ಜೈಲುವಾಸ ವಿಧಿಸಲಾಗುವುದು. ಈ ನಿಟ್ಟಿನಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವಂತೆ ಗುಂಡ್ಲುಪೇಟೆ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.