

ಚಾಮರಾಜನಗರ: ಮಾನವನ ದೇಹದ ಪಂಚೇಂದ್ರಿಯಗಳಲ್ಲಿ ಕಣ್ಣು ಅತ್ಯಮೂಲ್ಯವಾದುದ್ದು, ಅದನ್ನು ರಕ್ಷಣೆ ಮಾಡಿಕೊಳ್ಳಿ ಎಂದು ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಲಕ್ಷ್ಮೀಪತಿ ಸಲಹೆ ನೀಡಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೊಬಿಲಿಟಿ ಇಂಡಿಯಾ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಕಾರದೊಂದಿಗೆ ಮಂಗಳವಾರ ಆಯೋಜಿಸಿದ್ದ ದೃಷ್ಟಿ ದೋಷವುಳ್ಳ ಮಕ್ಕಳಿಗೆ ಉಚಿತ ಕಣ್ಣಿನ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಣ್ಣಿನ ರಕ್ಷಣೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ. ಅದರಲ್ಲೂ ದೃಷ್ಠಿಹೀನ ಮಕ್ಕಳಿಗೆ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿರುವುದು ಅತ್ಯಂತ ಉತ್ತಮ ಕಾರ್ಯವಾಗಿದೆ. ದೃಷ್ಠಿದೋಷವುಳ್ಳ ಮಕ್ಕಳು ಕೀಳಿರಿಮೆಯಿಂದ ಹೊರಬಂದು ಎಲ್ಲರ ಜತೆ ಬೆರೆಯಬೇಕು. ಆ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಸೋಮಣ್ಣೆ ಗೌಡ ಮಾತನಾಡಿ, 1 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಕಾರ್ಯಕ್ರಮ ಆಯೋಜನೆ ಮಾಡಿರುವುದು ಬಹಳ ಉಪಯುಕ್ತವಾಗಿದೆ. ಇದರ ಸದುಪಯೋಗವನ್ನು ಮಕ್ಕಳು ಹಾಗೂ ಶಿಕ್ಷಕರು ಪಡೆದುಕೊಳ್ಳಬೇಕು ಎಂದರು.
ಮೊಬಿಲಿಟಿ ಇಂಡಿಯಾ ಸಂಸ್ಥೆಯ ಸಂಯೋಜಕ ರಾಜಣ್ಣ ಮಾತನಾಡಿ, ಕಳೆದ 15 ವರ್ಷಗಳಿಂದ ನಮ್ಮ ಸಂಸ್ಥೆ ವತಿಯಿಂದ ಸಮನ್ವಯ ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬರಲಾಗುತ್ತಿದೆ ಎಂದರು.
ನಗರಸಭೆ ಸದಸ್ಯ ಮಹೇಶ್, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ರಾಜು, ಡಾ. ಶ್ರೀನಿವಾಸ್, ಬಿ.ಆರ್.ಸಿ ರಾಜೀವ್, ಸಿದ್ದರಾಜು, ಉಮೇಶ್, ಸುನೀಲ್, ರೆಬೆಲ್ಲೋ, ಶ್ರೀನಿವಾಸ್ ಭಾಗವಹಿಸಿದ್ದರು.