

ಚಾಮರಾಜನಗರ: ಜಿಲ್ಲೆಯಲ್ಲೂ ಪ್ರತಿಭಾವಂತ ಕ್ರೀಡಾಪಟುಗಳು ಇದ್ದು, ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಸೂಕ್ತ ಪ್ರೋತ್ಸಾಹವನ್ನು ನೀಡಿದರೆ ದೊಡ್ಡಮಟ್ಟದ ಯಶಸ್ಸು ಸಾಧಿಸುತ್ತಾರೆ ಎಂದು ಚಾ.ನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್(ಮುನ್ನ) ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಭಾಗವಹಿಸುವ ಯುವಕ, ಯುವತಿಯರು ಆರೋಗ್ಯದಿಂದ ಇರುತ್ತಾರೆ. ಕ್ರೀಡಾಪಟುಗಳು ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಎಲ್ಲರಲ್ಲೂ ಕ್ರೀಡಾಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ದಸರಾ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. 5 ತಾಲೂಕಿನಿಂದ ಬಂದಿರುವ ಮಕ್ಕಳು ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದುಕೊಳ್ಳಿ ಎಂದು ಆಶಿಸಿದರು.
ಜಿಲ್ಲಾ ಮಟ್ಟದಲ್ಲಿ ಸೋತವರು ಯಾವುದೇ ಕಾರಣಕ್ಕೂ ಕುಗ್ಗಬೇಡಿ. ಮುಂದಿನ ದಿನಗಳಲ್ಲಿ ಉತ್ತಮವಾಗಿ ಆಟವಾಡಿ ಆಯ್ಕೆಯಾಗುತ್ತೇನೆ ಎಂಬ ವಿಶ್ವಾಸವನ್ನು ಇಟ್ಟುಕೊಳ್ಳಿ. ಇತ್ತೀಚೆಗೆ ನಮ್ಮ ಜಿಲ್ಲೆಯ ಮಕ್ಕಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿದ್ದಾರೆ. ಕ್ರೀಡೆಯಲ್ಲಿ ಭಾಗವಹಿಸುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುತ್ತಾರೆ. ಅಂತಹ ಮಕ್ಕಳಿಗೆ ಶಿಕ್ಷಣ ಇಲಾಖೆ, ಕ್ರೀಡೆ ಇಲಾಖೆ ಸಹಕಾರ ನೀಡಿ ಪ್ರೋತ್ಸಾಹಿಸಬೇಕು ಎಂದರು.
ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಜಿಲ್ಲಾ ಕ್ರೀಡಾಂಗಣ ಪ್ರಾರಂಭವಾಗಿ 20 ವರ್ಷಗಳು ಆಗಿದೆ. ಕ್ರೀಡಾಂಗಣದಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು. ಕ್ರೀಡೆಯಲ್ಲಿ ತಾವು ಹಾಕಿಕೊಂಡಿರುವ ಗುರಿಯನ್ನು ತಲುಪಲು ಕಠಿಣವಾದ ಪರಿಶ್ರಮ ಅಗತ್ಯವಿದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜು, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕ ಚಿಕ್ಕಬಸವಯ್ಯ, ಮಹದೇವಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಕುಮಾರಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಶಿವಮಲ್ಲು, ನಾಗರತ್ನಮ್ಮ, ಖಜಾಂಚಿ ಮಹದೇವಸ್ವಾಮಿ, ಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.
ಗುಂಡು ಎಸೆಯುವ ಮೂಲಕ ಚಾಲನೆ:
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಗುಂಡು ಎಸೆಯುವ ಮೂಲಕ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಸಾಥ್ ನೀಡಿದರು. ಬಳಿಕ ವಿವಿಧ ತಾಲೂಕಿನಿಂದ ಆಗಮಿಸಿದ್ದ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ಜಿಲ್ಲಾಧಿಕಾರಿ ಪರಿಚಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.