

ಚಾಮರಾಜನಗರ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಎಸ್.ಸುದರ್ಶನ್ ಹೇಳಿದರು.
ಮುಖ್ಯಮಂತ್ರಿ ವಿರುದ್ಧ ಪ್ರಾಷಿಕ್ಯೂಷನ್‌ಗೆ ಆದೇಶ ನೀಡಿದ ರಾಜ್ಯಪಾಲರ ನಿರ್ಧಾರನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ನಮಗೆ ನ್ಯಾಯಾಂಗದ ವ್ಯವಸ್ಥೆ ಮೇಲೆ ನಂಬಿಕೆ ಇದ್ದು, ನ್ಯಾಯಾಲಯದಲ್ಲೇ ಮುಂದಿನ ಹೋರಾಟ ಮಾಡುತ್ತೇವೆ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ತಮ್ಮ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಲೂಟಿಮಾಡಿ, ಭ್ರಷ್ಟಚಾರ ಎಸಗಿದ ಬಿಜೆಪಿ, ಜೆಡಿಎಸ್ ನಾಯಕರಿಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಉಳಿದಿಲ್ಲ ಎಂದು ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. ಆದರೇ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮರ್ಪಕವಾಗಿ ಗ್ಯಾರೆಂಟಿ ಯೋಜನೆಗಳು ಜಾರಿಯಾಗಿದೆ. ಈ ಹಿಂದೆಯೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದರು. ರಾಜ್ಯದ ಜನಸಮೂಹ ಸಿದ್ದರಾಮಯ್ಯ ಅವರ ಪರವಾಗಿದೆ ಎಂದರು.
ಚಾಮರಾಜನಗರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಹಾಜರಾಗದ 4 ಜನ ಕಾಂಗ್ರೆಸ್ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. ಈ ಸಂಬಂಧ ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಇದನ್ನು ಶಿಸ್ತು ಸಮಿತಿಗೆ ವರ್ಗಾವಣೆ ಮಾಡಲಾಗಿದೆ. ಅವರು ವಿಚಾರಣೆ ನಡೆಸಿ ಮುಂದಿನ ಕ್ರಮವಹಿಸುತ್ತಾರೆ. ಈ ವಿಚಾರದಲ್ಲಿ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಎಚ್ಚರಿಕೆ ವಹಿಸಬೇಕಿತ್ತು ಎಂದು ಹೇಳಿದರು.
ಪಕ್ಷವನ್ನು ತಳಮಟ್ಟದಿಂದ ಸದೃಢಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ 4 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್(ಮುನ್ನ), ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್ ಹಾಜರಿದ್ದರು.