

ಹನೂರು: ಅಗತ್ಯ ಮೂಲಸೌಕರ್ಯ ಒದಗಿಸುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಹನೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾ ಕಾರ್ಯದರ್ಶಿ ನಂಜುಂಡ ಮಾತನಾಡಿ, ತಾಲೂಕಿನ ಕಂದಾಯ ವೃತ್ತ ವ್ಯಾಪ್ತಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಸಾರ್ವಜನಿಕರಿಗೆ ಹಲವು ಸೇವೆಗಳನ್ನು ಒದಗಿಸುವುದರ ಮೂಲಕ ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಸುಸಜ್ಜಿತ ಕಚೇರಿ ಇಲ್ಲ. ಗುಣಮಟ್ಟದ ಪೀಠೋಪಕರಣಗಳಿಲ್ಲ. ಕಂಪ್ಯೂಟರ್, ಮೊಬೈಲ್, ಪ್ರಿಂಟರ್, ಸ್ಕ್ಯಾನರ್ ಸೌಕರ್ಯವಿಲ್ಲ. ಆದ್ದರಿಂದ ಅಗತ್ಯ ುೂಲಸೌಕರ್ಯವನ್ನು ಒದಗಿಸಬೇಕು ಎಂದು ಕೋರಿದರು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ತಾಂತ್ರಿಕ ಹುದ್ದೆಯ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು. ಮೊಬೈಲ್ ತಂತ್ರಾಂಶದ ಕೆಲವು ಲೋಪದೋಷಗಳಿಂದ ಆಗಿರುವ ಅಮಾನತುಗಳನ್ನು ತಕ್ಷಣ ಹಿಂಪಡೆಯಬೇಕು. ರಾಜಸ್ವ ನಿರೀಕ್ಷಕರ ಹುದ್ದೆಗೆ ಪದೋನ್ನತಿ ನೀಡಬೇಕು. ಆದೇಶಕ್ಕಾಗಿ ಬಾಕಿ ಇರುವ ವರ್ಗಾವಣೆ ಪ್ರಕರಣಗಳಿಗೆ ಆದೇಶ ನೀಡಬೇಕು. ಕೆಲಸದ ಅವಧಿಗೂ ಮುನ್ನ ಹಾಗೂ ನಂತರ ನಡೆಯುವ ಎಲ್ಲ ಬಗೆಯ ವರ್ಚ್ಯುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸಬೇಕು. ಪ್ರಯಾಣ ಭತ್ಯೆಯನ್ನು 3 ಸಾವಿರ ರೂ.ಗೆ ಹೆಚ್ಚಿಸಬೇಕು. ಮನೆ ಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಕೈ ಬಿಡಬೇಕು. ಕರ್ತವ್ಯದ ವೇಳೆ ಜೀವ ಹಾನಿಯಾದರೆ ಅಧಿಕಾರಿಗಳ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ, ತೋಟಗಾರಿಕೆ ಇಲಾಖೆ ನಿರ್ವಹಿಸುವಂತೆ ಆದೇಶಿಸಬೇಕು. ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳು ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಿರುವುದು ಹಾಗೂ ಅಗತ್ಯ ಮೂಲಸೌಕರ್ಯ ಇಲ್ಲದಿರುವುದು ತಿಳಿದಿದೆ. ಆದ್ದರಿಂದ ಬೇಡಿಕೆಗಳನ್ನು ಈಡೇರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು. ಸಂಘದ ಜಿಲ್ಲಾಧ್ಯಕ್ಷ ಉಲ್ಲಾಸ್, ತಾಲೂಕು ಅಧ್ಯಕ್ಷ ರಾಜು, ಕಾರ್ಯದರ್ಶಿ ಕಾರ್ತಿಕ್, ಗ್ರಾಮ ಆಡಳಿತ ಅಧಿಕಾರಿಗಳಾದ ಶೇಷಣ್ಣ, ವಿನೋದ್, ವಾಸುದೇವ, ಲೋಕೇಶ್, ಕಾವ್ಯಾ, ಹೇಮಾ ಇದ್ದರು.