

ಚಾಮರಾಜನಗರ: ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳನ್ನು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯಾದ್ಯಂತ ತಾಲೂಕು ಕಚೇರಿಗಳ ಮುಂಭಾಗ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಗುರುವಾರ ಧರಣಿ ನಡೆಸಲಾಯಿತು.
ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು, ಯಳಂದೂರು ಹಾಗೂ ಗುಂಡ್ಲುಪೇಟೆ ತಾಲೂಕು ಕಚೇರಿಗಳ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ತೋಳಿಗೆ ಕಪ್ಪುಪಟ್ಟಿ ಧರಿಸಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಧರಣಿ ನಡೆಸಿದರು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು. ಹಲವಾರು ಮೂಲ ಸೌಕರ್ಯ ಹಾಗೂ ಸೇವಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಹಲವು ಸಮಸ್ಯೆ:
ತಾಲೂಕು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳು ಏಕಕಾಲದಲ್ಲಿ ಸುಮಾರು 17 ಮೊಬೈಲ್ ಆಪ್‌ಗಳನ್ನು ಬಳಕೆ ಮಾಡುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ಎದುರಿಸುತ್ತಿದ್ದಾರೆ ಎಂದು ಸಂಘದ ತಾಲೂಕು ಅಧ್ಯಕ್ಷ ಕೆ.ಶ್ರೀಧರ್ ಹೇಳಿದರು.
ನಗರದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳು, ಸೇವಾ ಸೌಲಭ್ಯಗಳು, ಮೊಬೈಲ್ ಆಪ್‌ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೆಲಸ ಸ್ಥಗಿತಗೊಳಿಸಿ ಕಪ್ಪು ಪಟ್ಟಿ ಧರಿಸಿ ಇಂದಿನಿಂದ ಅನಿರ್ದಿಷ್ಠಾವಧಿ ಮುಷ್ಕರ ನಡೆಸಲಾಗುತ್ತಿದೆ. ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ಶಾಂತಿಯುತ ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಟೇಬಲ್, ಕುರ್ಚಿ, ಗುಣ ಮಟ್ಟದ ಮೊಬೈಲ್‌ಗಳು, ಪ್ರಿಂಟರ್, ಸ್ಕಾೃನರ್ ಹಾಗೂ ಇನ್ನಿತರೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಅಂತರ್ ಜಿಲ್ಲಾ ವರ್ಗಾವಣೆಯನ್ನು ಮರುಸ್ಥಾಪಿಸಬೇಕು. ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ಕಂದಾಯ ಇಲಾಖೆಯ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಹೊಸ ಮಾರ್ಗಸೂಚಿಯನ್ನು ರಚಿಸಬೇಕು ಎಂದು ಹೇಳಿದರು.
ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು. ಪ್ರಯಾಣ ಭತ್ಯೆಯನ್ನು 500 ರೂ, ಗಳಿಂದ 3000 ರೂ, ಗಳಿಗೆ ಏರಿಕೆ ಮಾಡಬೇಕು. ಮನೆಹಾನಿ ಪ್ರಕರಣಗಳ ಜವಬ್ದಾರಿಯಿಂದ ನಮ್ಮನ್ನು ಕೈಬಿಡಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ಅಥವಾ ತೋಟಗಾರಿಕೆ ಇಲಾಖೆಗೆ ವಹಿಸಬೇಕು ಹಾಗೂ ಇನ್ನಿತರೆ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಉಪಾಧ್ಯಕ್ಷ ರಾಜೇಶ್‌ನಾಯಕ, ಪ್ರಧಾನ ಕಾರ್ಯದರ್ಶಿ ಎನ್.ರೇವಣ್ಣ, ಜಿಲ್ಲಾ ಗೌರವಾಧ್ಯಕ್ಷ ಸಿ.ಮಹೇಶ್, ತಾಲೂಕು ಗೌರವಾಧ್ಯಕ್ಷ ನಾಗೇಶ್ ಮೂರ್ತಿ, ಸರ್ಕಾರಿ ನೌಕರರ ಸಂಘದ ಸದಸ್ಯ ಸುಮಂತ್ ಕುಮಾರ್ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.