ಗ್ರಾ. ಪಂ.ನೌಕರರ ಪ್ರತಿಭಟನೆಗೆ ಶಿಕ್ಷಕರ ಸಂಘ ಬೆಂಬಲ

10rajesh1
Published on

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಪಂಚಾಯಿತಿ ಸದಸ್ಯರ ಒಕ್ಕೂಟದ ವತಿಯಿಂದ ನಡೆಸಲಾಗುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಬೆಂಬಲ ಸೂಚಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಮುಂದುವರಿದ ಪ್ರತಿಭಟನೆಯಲ್ಲಿ ಭಾಗಿಯಾದ ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಮಾತನಾಡಿ, ಜಿಲ್ಲಾ ಶಿಕ್ಷಕರ ಸಂಘ ಗ್ರಾ.ಪಂ. ಅಧಿಕಾರಿಗಳು ಹಾಗೂ ನೌಕರರೊಂದಿಗೆ ಇದೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯದಲ್ಲಿ ಗ್ರಾ.ಪಂ ಅಧಿಕಾರಿಗಳ ಹಾಗೂ ನೌಕರರ ಪಾತ್ರ ಬಹಳ ಮುಖ್ಯವಾಗಿದೆ. ಶಿಕ್ಷಣ ಇಲಾಖೆಯ ಅನೇಕ ಕಾರ್ಯಕ್ರಮಗಳು ಹಾಗೂ ಶಾಲೆಯ ಅಭಿವೃದ್ಧಿ ಅನುದಾನ ಬರಿಸುವಲ್ಲಿ ಪಂಚಾಯತ್ ರಾಜ್ ಇಲಾಖೆ ಸಹಕಾರಿಯಾಗಿದೆ ಎಂದರು.

ಹಳ್ಳಿಗಾಡಿನ ಪ್ರದೇಶದಲ್ಲಿ ಸ್ತ್ರೀ ಸಾಮಾನ್ಯರ ಬದುಕು ಉತ್ತಮವಾಗುವಲ್ಲಿ ಹಾಗೂ ಸರ್ಕಾರ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡುವಲ್ಲಿ ಗ್ರಾ.ಪಂ ಅಧಿಕಾರಿಗಳು ಮಹತ್ವದ ಪಾತ್ರ ವಹಿಸುತ್ತಾರೆ. ಹೀಗಿರುವಾಗ ಅಧಿಕಾರಿಗಳ ಬೇಡಿಕೆಯನ್ನು ತಡ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಕೂಡಲೇ ಅವರ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಉಪಾಧ್ಯಕ್ಷ ಮುರುಗೇಶ್ ಕುಮಾರ್, ಕೃಷ್ಣಮೂರ್ತಿ, ಎನ್.ಎಸ್.ಮಹದೇವಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವೃಂದಗಳ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಾಂತಮೂರ್ತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದ ಶಿವಮಾದೇಶ್, ರಾಜೇಂದ್ರ, ಲಕ್ಷ್ಮಣ್‌ನಾಯಕ್, ಗೋವಿಂದರಾಜು ಇತರರು ಭಾಗವಹಿಸಿದ್ದರು.

ಶಾಸಕ ಎಆರ್‌ಕೆ ಭೇಟಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಪಂಚಾಯಿತಿ ಸದಸ್ಯರ ಒಕ್ಕೂಟದ ವತಿಯಿಂದ ನಡೆಸಲಾಗುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿದರು. ಗ್ರಾ.ಪಂ ನೌಕರರು ಮತ್ತು ಸದಸ್ಯರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ಪರಿಹಾರ ಕಲ್ಪಿಸಲಾಗುವುದು. ಈ ಕುರಿತು ಮುಖ್ಯಮಂತ್ರಿ ಮತ್ತು ಸಚಿವರ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆರ್.ಮಹದೇವ್, ಕೆಸ್ತೂರು ಕೇಶವಮೂರ್ತಿ ಹಾಗೂ ಇತರರು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net