

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಯ ಭಾಗವಾಗಿ ಚಾಮರಾಜನಗರ ದಸರಾ ಮಹೋತ್ಸವವನ್ನು ಆಯೋಜಿಸಿದ್ದು, ಇದನ್ನು ಜಿಲ್ಲೆಯ ಹಬ್ಬವಾಗಿ ಸಂಭ್ರಮಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ನಗರದ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಅಂಗನವಾಡಿ ಕಾರ್ಯಕರ್ತರಿಗೆ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟ ಮತ್ತು ಒಲೆ ರಹಿತ ಅಡುಗೆ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತರು ಸರ್ಕಾರದ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸಲು ತುಂಬಾ ಶ್ರಮವಹಿಸುತ್ತಾರೆ. ತುಂಬಾ ಒತ್ತಡದಲ್ಲಿ ಜೀವನ ಸಾಗಿಸುವ ಅವರಿಗೂ ದಸರಾ ಹಬ್ಬವನ್ನು ಸಂಭ್ರಮಿಸುವ ಅವಕಾಶ ಮಾಡಿಕೊಡುವ ಉದ್ದೇಶದಿಂದ ಈ ಕ್ರೀಡಾಕೂಟ ಮತ್ತು ಇನ್ನಿತರೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ.7 ರಂದು ನಡೆಯಲಿರುವ ಮಹಿಳಾ ದಸರಾ ಕಾರ್ಯಕ್ರಮದಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.