ಚಾಮರಾಜನಗರ : ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಗಟ್ಟಬೇಕು ಹಾಗೂ ಆ ಗೇಮ್‌ಗಳನ್ನು ನಿಷೇಧಿಸುವಂತೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮನವಿ ಸಲ್ಲಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಸುರೇಶ್‌ನಾಯಕ್ ಮಾತನಾಡಿ,
ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳಿಂದ ಹಲವಾರು ವಿದ್ಯಾರ್ಥಿಗಳು, ಯುವಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದನ್ನು ಯುವ ಜನಾಂಗ ಒಂದು ಚಟವಾಗಿಸಿಕೊಂಡಿದ್ದು, ಪರಿಣಾಮವಾಗಿ ಹಲವಾರು ಕುಟುಂಬಗಳು ಬೀದಿಗೆ ಬಿದ್ದಿದೆ. ಸಾಕಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವೆಬ್ಸೈಟ್ ನಡೆಸುತ್ತಿದ್ದ, ಇಬ್ಬರು ಬುಕ್ಕಿಗಳ ಮೇಲೆ ಎಫ್ ಐಆರ್ ದಾಖಲಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕಿದೆ. ಸಾರ್ವಜನಿಕರನ್ನು ವಂಚಿಸುತ್ತಿರುವ ಆನ್‌ಲೈನ್ ಗೇಮ್ ವೆಬ್ಸೈಟ್ ಹಾಗೂ ಅಪ್ಲಿಕೇಷನ್‌ಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ಗ್ರೇಡ್-1 ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ನಮ್ಮ ಕರ್ನಾಟಕ ಸೇನೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉಸ್ಮಾನ್, ಉಪಾಧ್ಯಕ್ಷ ನಾಗರಾಜು, ತಾಲೂಕು ಅಧ್ಯಕ್ಷ ಶ್ರೀನಿವಾಸ್, ಮಹದೇವಸ್ವಾಮಿ, ಶ್ರೀನಿವಾಸ್ ಹಾಗೂ ಇತರರು ಹಾಜರಿದ್ದರು.