ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ಪ್ರತಿಭಟನೆ

CLK PTCL 23
Published on

ಚಾಮರಾಜನಗರ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ್ರು ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಮಣಿಪುರ ಸರ್ಕಾರದ ವಿರುದ್ದ ೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ್ರು ಮಾತನಾಡಿ, ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಕಳೆದ ಮೂರು ತಿಂಗಳಿಂದ ಜನಾಂಗೀಯ ಗಲಾಟೆಯಿಂದ ಕೊಲೆ, ಲೂಟಿ, ದೊಂಬಿ ನಡೆಯುತ್ತಿದ್ದರೂ ಮಣಿಪುರದ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಮೌನವಾಗಿ ನಿರ್ಲಕ್ಷ್ಯ ವಹಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಮಣಿಪುರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಉಪಾಧ್ಯಕ್ಷ ಬೆಂಕಿ ಶ್ರೀಧರ್ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿರುವುದು ಮನುಕುಲವೇ ನಾಚಿಕೆ ಪಡುವ ಸಂಗತಿಯಾಗಿದ್ದು, ಇಂತಹ ಘಟನೆಗಳು ಆಗಾಗ ನಡೆಯುತ್ತಿದ್ದರೂ ನಾವೆಲ್ಲಾ ಮೌನವಾಗಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಭಯಾನಕ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಯರಗಂಬಳ್ಳಿ ಮಲ್ಲು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಣಿ
ರಂಜಿತ್ ಗೌಡ, ವೀರಪ್ಪ, ಮಹದೇವಯ್ಯ, ಚಿಕ್ಕಯ್ಯ, ಪಿ.ಲಿಂಗರಾಜು, ಆರ್.ಮಹದೇವಶೆಟ್ಟಿ, ನಾರಾಯಣ, ಶಿವಮೂರ್ತಿ, ಕೆ.ಕೆ.ನಾಗರಾಜು, ರಾಜು ಆಟೋ ರಾಜು, ಮೂರ್ತಿ, ಶಿವಸ್ವಾಮಿ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net