ಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ

17CHN9
Published on

ಚಾಮರಾಜನಗರ: ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮಗಳು ಅಗತ್ಯವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆ ಹೆಚ್ಚಾಗುತ್ತಿದ್ದು, ತಡೆಯುವ ಅಗತ್ಯವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಮದುವೆ ಮಾಡಲಾಗುತ್ತಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಪೋಕ್ಸೋ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ಈ ಸಂಬಂಧ ಅರಿವು ಅಗತ್ಯ. ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ, ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಮಹಿಳೆಯರಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಅವರನ್ನು ಪ್ರತಿಯೊಬ್ಬ ಮಹಿಳೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ಸಾಗಬೇಕು. ಕೇಂದ್ರ ಸರ್ಕಾರ 2005ರಲ್ಲಿ ಕೌಟುಂಬಿಕ ದೌರ್ಜನ್ಯ ಕಾಯ್ದೆ, 1961ರಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಅಲ್ಲದೆ, ಜೀವನಾಂಶವನ್ನು ಕಾನೂನು ವ್ಯಾಪ್ತಿಗೆ ತರಲಾಗಿದೆ. ವರದಕ್ಷಿಣೆ ಸಂಬಂಧ ಅರಿವು ಮೂಡಿದ್ದು, ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ, ವಿವಾಹ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿರುವುದು ಬೇಸರದ ಸಂಗತಿ. ಮಹಿಳೆಯರ ಮೇಲೆ ದೈಹಿಕ, ಮಾನಸಿಕ ಹಿಂಸೆ ಕೊಟ್ಟವರಿಗೆ 498ಎ ಕಾಯ್ದೆ ಪ್ರಕಾರ 3 ವರ್ಷ ಶಿಕ್ಷೆ, ದಂಡ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಮಂಜು ಹರವೆ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಸ್ವಾಮಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net