ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Nagendra crime
Published on

ಚಾಮರಾಜನಗರ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

ತಾಲೂಕಿನ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಾಗೇಶ್(23) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಸೆ.13 ರಂದು 12 ವರ್ಷದ ಬಾಲಕಿಯನ್ನು ನನ್ನ ಜತೆ ಬಂದು ಬಿಡು, ನಾನು ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅಪಹರಿಸಿಕೊಂಡು ಹೋಗಿದ್ದ. ಅಪ್ರಾಪ್ತೆ ಎಂದು ಗೊತ್ತಿದ್ದರೂ ಬಾಲಕಿಯ ಇಷ್ಟಕ್ಕೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ವೃತ್ತ ನಿರೀಕ್ಷಕ ಎಂ.ಎಲ್.ಶೇಖರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಅಪರಾಧಿ ನಾಗೇಶ್ ಎಸಗಿರುವ ಕೃತ್ಯ ಸಾಬೀತಾಗಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ಮಕ್ಕಳ ಸ್ನೇಹಿ ಹಾಗೂ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರವನ್ನು 30 ದಿನದೊಳಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net