ಗೃಹಲಕ್ಷ್ಮೀ ಲಾನುಭವಿ ಮಹಿಳೆಯರನ್ನು ಕರೆತನ್ನಿ

27chn4
Published on

ಚಾಮರಾಜನಗರ : ಮೈಸೂರಿನಲ್ಲಿ ಆ.30 ರಂದು ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಬಹು ಮುಖ್ಯವಾದ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ 2 ಸಾವಿರ ರೂ. ನೀಡುವ ಮಹಾತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಆ. 30 ರಂದು ಮೈಸೂರಿನಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಭದ್ರಕೋಟೆ:
ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಶಾಸಕರು ಆಯ್ಕೆಯಾಗಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಯೋಜನೆಗಳನ್ನು ರೂಪಿಸಿ, ಅವರನ್ನು ಜಾಗೃತಿಯಿಂದ ಕರೆದುಕೊಂಡು ಬರುವ ಜವಾಬ್ದಾರಿ ನಿಮ್ಮೆಲ್ಲರಾದ್ದಾಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರು, ಶಾಸಕರು ಐದು ಗ್ಯಾರಂಟಿಗಳನ್ನು ಈಡೇರಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಕಾಂಗ್ರೆಸ್ ಕಚೇರಿ ನಿರ್ಮಾಣವಾಗಬೇಕು. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲೆಯ ಶಾಸಕರು ಕೈಜೋಡಿಸಿ ನಗರದ ವ್ಯಾಪ್ತಿಯಲ್ಲಿ ಕನಿಷ್ಠ 1 ಎಕರೆ ಜಮೀನು ಖರೀದಿ ಮಾಡಿ, ಕೆಪಿಸಿಸಿಗೆ ನೀಡಿದರೆ, ತಕ್ಷಣದಿಂದಲೇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುತ್ತೇವೆ. ಇನ್ನು ಮೂರ‌್ನಾಲ್ಕು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣವಾಗಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಶಾಸಕ ಎ.ಆರ್. ಕೃಷ್ಣಮೂರ್ತಿ, ಸಿ. ಪುಟ್ಟರಂಗಶೆಟ್ಟಿ, ಎಚ್.ಎಂ. ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್, ನೆಲಮಂಗಲದ ಶಾಸಕ ಶ್ರೀನಿವಾಸ್, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಮಾಜಿ ಸಂಸದ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಆರ್. ಮಹದೇವ್, ಬ್ಲಾಕ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್, ತೋಟೇಶ್, ಮಹೇಂದ್ರ ವರ್ಮ, ಹೊಂಗನೂರು ಚಂದ್ರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net