ಗೃಹಲಕ್ಷ್ಮೀ ನೋಂದಣಿಯಲ್ಲಿ ಜಿಲ್ಲೆಗೆ 2ನೇ ಸ್ಥಾನ

IMG-20230828-WA0065
Published on

ಚಾಮರಾಜನಗರ: ಮಹಿಳೆಯ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಗೃಹಲಕ್ಷ್ಮೀ ಯೋಜನೆಯ ಯಶಸ್ಸಿನ ಸಿಂಹಪಾಲು ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವ ಕಾರ್ಯಕ್ರಮದ ಅಂಗವಾಗಿ ಸೋಮವಾರ ನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂದು ಕರೆಯುತ್ತಾರೆ. ಆದರೆ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರತಿಯೊಬ್ಬರ ಮನೆ ಮನೆಗೂ ಹೋಗಿ ಗೃಹಲಕ್ಷ್ಮೀಗೆ ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ದೊರೆಯಲಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 18,000 ಗೃಹಲಕ್ಷ್ಮೀಯರು ಬರುವ ನಿರೀಕ್ಷೆ ಹೊಂದಲಾಗಿದೆ. ಅವರಿಗೆ ಬಸ್, ಊಟ, ತಿಂಡಿ, ಕುಡಿಯುವ ನೀರು ಹಾಗೂ ಇನ್ನಿತರ ವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 2000 ರೂ. ಹಾಕಲಾಗುತ್ತಿದೆ. ಶ್ರೀಮಂತರಿಗೆ ಇದು ಕೇವಲವಾದರೂ, ಬಡ ಮಹಿಳೆಯರಿಗೆ ಇದು ದೊಡ್ಡದಾಗಿದೆ. ತಮ್ಮ ಮಕ್ಕಳ ವಿದ್ಯಾಭ್ಯಾಸ, ಅಡುಗೆ ಅನಿಲ ಹಾಗೂ ಔಷಧ ಖರೀದಿಗೆ ಬಳಸಿಕೊಳ್ಳಬಹುದು. ಈ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಅನುಕೂಲವಾಗಲಿದೆ ಎಂದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಮಹಿಳಾ ಪರವಾದ ಆಶಯಗಳಂತೆ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಮಹಿಳೆಯನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿಯೊಬ್ಬ ಗೃಹಲಕ್ಷ್ಮೀಯರು ತಮ್ಮ ಮನೆಯ ಮುಂದೆ ರಂಗೋಲಿ ಬಿಡಿಸಿ, ಹಬ್ಬದಂತೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಟಿ.ಸಿ.ಶಿಲ್ಪನಾಗ್ ಮಾತನಾಡಿ, ಜಿಲ್ಲೆಯಲ್ಲಿ 2,44,047 ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಶೇ.88 ರಷ್ಟು ಸಾಧನೆ ಮಾಡಿ ಜಿಲ್ಲೆಯು ನೋಂದಣಿಯಲ್ಲಿ ರಾಜ್ಯದಲ್ಲೇ 2 ನೇ ಸ್ಥಾನದಲ್ಲಿದೆ. ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 260 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 18,000 ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮೀ ಉಪಸ್ಥಿತರಿದ್ದರು.

ಪಿಕ್ಚರ್ ಅಭಿ ಬಾಕಿ ಹೈ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುತ್ತಿರುವುದು ಟ್ರೇಲರ್ ಅಷ್ಟೆ. ಪಿಕ್ಚರ್ ಅಭಿ ಬಾಕಿ ಹೈ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಹೇಳಿದರು.
ಸರ್ಕಾರ ಬಂದು ಕೇವಲ ನೂರು ದಿನ ಆಗಿದೆ. ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೊಳಿಸುತ್ತಿದ್ದೇವೆ. ಗೃಹಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುತ್ತೇವೆ. ಆದರೆ ಇಷ್ಟಕ್ಕೆ ಇದು ಮುಗಿಯುವುದಿಲ್ಲ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಮತ್ತಷ್ಟು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯನ್ನು ಮನೆಮನೆಗೆ ತಲುಪಿಸಿದ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಅಪಾರವಾಗಿದೆ. ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ.ಎಚ್.ಎಂ.ಗಣೇಶ್‌ಪ್ರಸಾದ್, ಶಾಸಕ, ಗುಂಡ್ಲುಪೇಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ವರದಾನವಾಗಿವೆ. ಜಿಲ್ಲೆಯ ಮಹಿಳೆಯರು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು.ಸಿ.ಪುಟ್ಟರಂಗಶೆಟ್ಟಿ, ಶಾಸಕ, ಚಾಮರಾಜನಗರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net